ಮುಂಬೈ: ಮುಂಬೈನ ತೀರ ಪ್ರದೇಶದ ಐಷಾರಾಮಿ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ (ಎನ್ ಸಿಬಿ) ಅಧಿಕಾರಿಗಳು ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ.
ಎನ್ ಸಿಬಿ ಅಧಿಕಾರಿಗಳ ವಶದಲ್ಲಿದ್ದ ಆರ್ಯನ್ ಖಾನ್ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ ಮಾಡುತ್ತಿರುವ ಮಾಹಿತಿಯನ್ನು ಆಧರಿಸಿ ಶನಿವಾರ ರಾತ್ರಿ ಮಹಾರಾಷ್ಟ್ರದ ಎನ್ ಸಿಬಿ ಅಧಿಕಾರಿಗಳು ಪ್ರಯಾಣಿಕರ ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿದ್ದರು. ನೂರಾರು ಮಂದಿ ಪ್ರಯಾಣಿಕರಿದ್ದ ಹಡಗು ಗೋವಾ ಕಡೆಗೆ ಸಾಗುವುದಿತ್ತು. ಹಡಗಿನಲ್ಲಿ ಪಾರ್ಟಿ ನಡೆಯುತ್ತಿರುವ ಮಾಹಿತಿಯನ್ನು ಆಧರಿಸಿ ಎನ್ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ನೇತೃತ್ವದ ಎನ್ಸಿಬಿ ತಂಡವು ಹಡಗಿನಲ್ಲಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಹಡಗಿನಲ್ಲಿ ಆರ್ಯನ್ ಖಾನ್ ಕೂಡ ಪತ್ತೆಯಾಗಿದ್ದರು.
#WATCH | Narcotics Control Bureau (NCB) yesterday
— ANI (@ANI) October 2, 2021
detained at least 10 persons during a raid conducted at a party being held on a cruise in Mumbai
(Earlier visuals from outside NCB office) pic.twitter.com/c0OctLI1jk
ಕೆಲವು ಪ್ರಯಾಣಿಕರಿಂದ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ಯಾವುದೇ ಪ್ರಯಾಣಿಕರಿಗೆ ಹಡಗಿನಿಂದ ಹೊರಹೋಗಲು ಅವಕಾಶ ನೀಡಿಲ್ಲ, ಹಾಗೇ ಆರ್ಯನ್ ಖಾನ್ ಅವರನ್ನು ಕೂಡ ವಿಚಾರಣೆ ನಡೆಸಲಾಗಿದೆ. ಆದರೆ, ಅವರು ಡ್ರಗ್ಸ್ ಬಳಕೆ ಮಾಡಿದ್ದರೇ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಎನ್ ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.