ಬೆಂಗಳೂರು: ಶಾಲಾ ಕಾಲೇಜಿನಲ್ಲಿ ಹಿಜಾಬ್ ಗೆ ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಸರಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್. ಶಿಕ್ಷಣ ಸಂಸ್ಥೆಗಳಿಗೆ ಸಮವಸ್ತ್ರ ನಿರ್ಧರಿಸುವ ಅಗತ್ಯ ಇದೆ ಎಂದು ನ್ಯಾಯಾಲಯ ಆದೇಶ ನೀಡಿದೆ.
ಹಿಜಾಬ್ ಧರಿಸಿ ತರಗತಿ ಪ್ರವೇಶಿಸುವುದನ್ನು ನಿರ್ಬಂಧಿಸಿದ್ದ ಕೆಲ ಶಾಲೆ- ಕಾಲೇಜು ಆಡಳಿತ ಮಂಡಳಿಗಳ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ದಾಖಲಿಸಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ಮೂವರು ಸದಸ್ಯರ ವಿಸ್ತೃತ ನ್ಯಾಯಪೀಠ ಫೆ. 25ಕ್ಕೆ ವಿಚಾರಣೆ ಮುಗಿಸಿ, ತೀರ್ಪು ಕಾಯ್ದಿರಿಸಿತ್ತು.
ತೀರ್ಪು ಪ್ರಕಟಣೆಗೆ ಸಮಯ ನಿಗದಿ ಮಾಡುತ್ತಿದ್ದಂತೆ ಬೆಂಗಳೂರು ನಗರ ಹಾಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಸಂಭ್ರಮಾಚರಣೆ ನಿರ್ಬಂಧಿಸಲಾಗಿದೆ. ಪಟಾಕಿಗಳನ್ನು ಸುಡುವುದು, ಸರ್ಕಾರಿ ಬಸ್ ಅಥವಾ ಇತರ ವಾಹನಗಳಿಗೆ ಅಡೆತಡೆ ಉಂಟು ಮಾಡುವುದನ್ನು ಪ್ರತಿಬಂಧಿಸಲಾಗಿದೆ.