ನ್ಯೂಸ್ ನಾಟೌಟ್ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಎನ್ ಐಎ (ರಾಷ್ಟ್ರೀಯ ತನಿಖಾ ದಳ)ಗೆ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಅಂತರಾಜ್ಯ ನಂಟಿದೆ. ಈ ನಿಟ್ಟಿನಲ್ಲಿ ತನಿಖೆಯನ್ನು ಎನ್ ಐ ಎಗೆ ವಹಿಸಬೇಕು ಎಂದು ತೀರ್ಮಾನಿಸಲಾಗಿದೆ ಎಂದರು.
ಎರಡು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿತ್ತು. ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದೀಗ ಈ ಪ್ರಕರಣವನ್ನು ಎನ್ ಐಎ ಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.