ನ್ಯೂಸ್ ನಾಟೌಟ್: ‘ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರದಿಂದ ಬುಧವಾರದವರೆಗೆ (ಸೆಪ್ಟೆಂಬರ್ 26ರಿಂದ 28) ರಾಜ್ಯಕ್ಕೆ ಭೇಟಿ ನೀಡಲಿದ್ದು, ವಿವಿಧ ಸಮಾರಂಭಗಳಲ್ಲಿ ಭಾಗವಹಿಸಲಿದ್ದಾರೆ.
ಈ ಬಗ್ಗೆ ಭಾನುವಾರ ಅಧಿಕೃತ ಪ್ರಕಟಣೆಯನ್ನು ಹೊರಡಿಸಿರುವ ರಾಷ್ಟ್ರಪತಿ ಭವನ, ‘ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ನಂತರ, ಮುರ್ಮು ಅವರು ಭೇಟಿ ನೀಡುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ’ ಎಂದು ಹೇಳಿದೆ.
ಸೋಮವಾರದಂದು ಮುರ್ಮು ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಆಯೋಜಿಸಿರುವ ‘ಪೌರ ಸನ್ಮಾನ’ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮಗಳ ಬಳಿಕ ಧಾರವಾಡದಲ್ಲಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.