ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯಂದು ವಿಶೇಷ ಜಾತ್ರೆಯಲ್ಲಿ ಐಸ್ ಕ್ರೀಂ ಅಂಗಡಿ ಇಟ್ಟ ಯುವಕನಿಗೆ ಪೊಲೀಸ್ ಅಧಿಕಾರಿಯೊಬ್ಬರು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಠಾಣೆಗೆ ಕರೆದುಕೊಂಡು ಹೋಗಿ ಚೆನ್ನಾಗಿ ಥಳಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಕಟ್ರುಪಾಡಿ ಗ್ರಾಮದ ಬೀಮಗುಂಡಿ ನಿವಾಸಿ ಶಶಿಕಿರಣ್ ಎಂಬವರು ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ. ಇವರು ಜಾತ್ರೆಯಲ್ಲಿ ಜ್ಯೂಸ್ ಹಾಗೂ ಐಸ್ ಕ್ರೀಂ ವ್ಯಾಪಾರ ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಸ್ವತಃ ಶಶಿಕಿರಣ್ ಈ ಬಗ್ಗೆ ಮಾಧ್ಯಮಗಳಿಗೆ ಹೇಳಿದ್ದು ಹೀಗೆ, ರಾತ್ರಿ ೧೨ ಗಂಟೆ ಸುಮಾರಿಗೆ ಸ್ಟಾಲಿಗೆ ಬಂದ ಪೊಲೀಸ್ ಸಿಬ್ಬಂದಿ ಭೀಮಣ್ಣ ಗೌಡ ಎಂಬವರು ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ನಾನು ಹೆದರಿ ೧,೦೦೦ ರೂ ಗಳನ್ನು ನೀಡಿದೆ. ಆದರೆ ಅವರು ಈ ಹಣ ಸಾಕಾಗುವುದಿಲ್ಲ ೫೦೦೦ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಅಷ್ಟು ಹಣ ನೀಡದಿದ್ದಾಗ ನನ್ನನು ಠಾಣೆಗೆ ಕರೆದುಕೊಂಡು ಹೋಗಿ ಚಿತ್ರಹಿಂಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಶಶಿಕಿರಣ್ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.