ನ್ಯೂಸ್ ನಾಟೌಟ್ : ಹಣಕಾಸಿನ ವ್ಯವಹಾರದಲ್ಲಿ ವಂಚನೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ಇಬ್ಬರು ವ್ಯಕ್ತಿಗಳಿಗೆ ಬೆಂಬಲ ನೀಡಿದ್ದಾರೆಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತನ್ನ ಕಾರಿನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಂಗಳೂರಿನ ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ಈ ಘಟನೆ ನಡೆದಿದೆ.ಪತ್ರದಲ್ಲಿ ಶಾಸಕ ಅರವಿಂದ ಲಿಂಬಾವಳಿ ಹೆಸರು ಸೇರಿದಂತೆ ಒಟ್ಟು ಆರು ಮಂದಿ ಹೆಸರು, ಫೋನ್ ನಂಬರ್ ಸಮೇತ ಬರೆದಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಏನಿದು ಪ್ರಕರಣ?
ಹೆಚ್ಎಸ್ಆರ್ ಲೇಔಟ್ ನಿವಾಸಿ ಪ್ರದೀಪ್ (47) ಆತ್ಮಹತ್ಯೆ ಮಾಡಿಕೊಂಡವರು. ಡೆತ್ನೋಟ್ನಲ್ಲಿ ಮಹದೇವಪುರ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 6 ಪ್ರಭಾವಿ ರಾಜಕಾರಣಿಗಳ ಹೆಸರನ್ನು ಉಲ್ಲೇಖಿಸಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಾಜಿ ಸಚಿವ ಅರವಿಂದ ಲಿಂಬಾವಳಿ, ಜಿ.ರಮೇಶ್ ರೆಡ್ಡಿ, ಕೆ.ಗೋಪಿ, ಜಯರಾಮ್ ರೆಡ್ಡಿ, ರಾಘವ ಭಟ್, ಸೋಮಯ್ಯ ಹೆಸರು ಉಲ್ಲೇಖಿಸಿ 6 ಜನರ ಮೇಲೆ ಕ್ರಮ ಜರುಗಿಸಿ ನನ್ನ ಸಾವಿಗೆ ನ್ಯಾಯ ಒದಗಿಸಿ ಎಂದು ಪ್ರದೀಪ್ ಡೆತ್ನೋಟ್ನಲ್ಲಿ ಮನವಿ ಮಾಡಿದ್ದಾರೆ. ಹೆಸರಿನ ಮುಂದೆ ಮೊಬೈಲ್ ನಂಬರ್ ಬರೆದಿದ್ದು,ಹಣಕಾಸಿನ ವ್ಯವಹಾರದಲ್ಲಿ ವಂಚನೆ ಸಂಬಂಧ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೆ.ಗೋಪಿ ಮತ್ತು ಸೋಮಯ್ಯ ಅವರಿಗೆ ಅರವಿಂದ ಲಿಂಬಾವಳಿ ಅವರು ಬೆಂಬಲ ನೀಡಿದ್ದಾರೆ ಎಂದು ಪ್ರದೀಪ್ ಹೇಳಿದ್ದಾರೆ.
ನಿನ್ನೆ ಹೊಸ ವರ್ಷಾಚರಣೆ ಹಿನ್ನಲೆ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಕುಟುಂಬ ಸಮೇತರಾಗಿ ಪ್ರದೀಪ್ ರೆಸಾರ್ಟ್ವೊಂದಕ್ಕೆ ಹೋಗಿದ್ದರು ಎಂದು ತಿಳಿದುಬಂದಿದೆ. ಸದ್ಯ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡ ಸ್ಥಳಕ್ಕೆ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಾಮನಗರ ಎಸ್ಪಿ ಸಂತೋಷ್ ಬಾಬು ಕೂಡ ಆಗಮಿಸಿದ್ದಾರೆ.