ನ್ಯೂಸ್ನಾಟೌಟ್: ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ದೇಶ ಹಾಗೂ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಬಿಜೆಪಿಯ ಬೇರುಗಳನ್ನು ತಳಮಟ್ಟದಲ್ಲಿ ಭದ್ರಗೊಳಿಸಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಶ್ರಮಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ತಿಳಿಸಿದರು.
ಉಡುಪಿಯಲ್ಲಿ ಸೋಮವಾರ ಜಿಲ್ಲಾ ಬೂತ್ ಮಟ್ಟದ ಸಮಾವೇಶದಲ್ಲಿ ಮಾತನಾಡಿ, ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಅಧಿಕಾರವಧಿಯಲ್ಲಿ ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಕೋವಿಡ್ ಸಂದರ್ಭ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಿಂದ 80 ಕೋಟಿ ಜನರು ಪ್ರಯೋಜನ ಪಡೆದರು. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3.50 ಕೋಟಿ ಮನೆ ನಿರ್ಮಿಸಲಾಗಿದೆ. ಕರ್ನಾಟಕದಲ್ಲಿ 9 ಲಕ್ಷ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಸ್ವಚ್ಛಭಾರತ್ ಯೋಜನೆಯಡಿ ಸ್ವಚ್ಛತಾ ಅಭಿಯಾನ, ಶೌಚಾಲಯ ನಿರ್ಮಾಣ ಮೊದಲಾದವುಗಳ ನಿರ್ಮಾಣವಾಗಿದೆ ಎಂದು ವಿವರಿಸಿದರು.
ಮೀಸಲಾತಿ ಹೆಚ್ಚಳ: ರಾಜ್ಯದ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸಿದೆ. ರೈತ ವಿದ್ಯಾನಿಧಿ ಮೂಲಕ ಲಕ್ಷಾಂತರ ಮಕ್ಕಳಿಗೆ ಪ್ರಯೋಜನವಾಗಿದೆ ಎಂದು ಜೆ.ಪಿ. ನಡ್ಡಾ ವಿವರಿಸಿದರು.
ಸಮಾವೇಶದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ಸಚಿವರಾದ ಸುನೀಲ್ ಕುಮಾರ್, ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ ಮತ್ತಿತರರಿದ್ದರು.