ಕ್ಯಾಂಪ್ಕೋ ಸುವರ್ಣ ಮಹೋತ್ಸವಕ್ಕೆ ಹೆಚ್ಚಿನ ಬಸ್ಗಳ ನಿಯೋಜನೆ ಹಿನ್ನೆಲೆ
ನ್ಯೂಸ್ ನಾಟೌಟ್: ಪುತ್ತೂರಿನಲ್ಲಿ ಫೆ.11 ರಂದು ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಸಚಿವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ಹಿನ್ನೆಲೆಯಲ್ಲಿ ಅಲ್ಲಿನ ಕಾರ್ಯಕ್ರಮದ ಸಂಯೋಜಕರು ಕೆ.ಎಸ್.ಆರ್.ಟಿ.ಸಿ ಪುತ್ತೂರು ವಿಭಾಗದಿಂದ ಹೆಚ್ಚಿನ ಬಸ್ಸುಗಳನ್ನು ನಿಯೋಜನೆ ಮಾಡಲು ಬೇಡಿಕೆ ಸಲ್ಲಿಸಿದ್ದಾರೆ.
ಈ ನಿಟ್ಟಿನಲ್ಲಿ ಪುತ್ತೂರು ವಿಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳನ್ನು ನಿಯೋಜನೆ ಮಾಡಲಾಗುತ್ತಿದೆ. ಆದ್ದರಿಂದ ಅಂದು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಕಡಬ ಹಾಗೂ ಮಡಿಕೇರಿ ತಾಲೂಕುಗಳ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ನಿಗಮದ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಸಾರ್ವಜನಿಕರು, ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕರಾರಸಾ ನಿಗಮದೊಂದಿಗೆ ಸಹಕರಿಸಬೇಕಾಗಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.