ನ್ಯೂಸ್ನಾಟೌಟ್: ಇಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಶಿವಮೊಗ್ಗ ಮತ್ತು ಬೆಳಗಾವಿಯಲ್ಲಿ ಪ್ರಮುಖ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಳಗ್ಗೆ 11.35ಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಇಲ್ಲಿನ ಸೋಗಾನೆಯಲ್ಲಿ 775 ಎಕರೆ ಪ್ರದೇಶದಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ರಾಜ್ಯದ 9ನೇ ಮತ್ತು ದೇಶದ 148ನೇ ವಿಮಾನ ನಿಲ್ದಾಣ ಇದಾಗಿದೆ. ನಂತರ 3500 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಅಲ್ಲಿಂದ ಮಧ್ಯಾಹ್ನ 2.20ಕ್ಕೆ ಬೆಳಗಾವಿಗೆ ಆಗಮಿಸಲಿರುವ ಮೋದಿ 190 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಂಡ ಬೆಳಗಾವಿ ರೈಲು ನಿಲ್ದಾಣ ಉದ್ಘಾಟಿಸಲಿದ್ದಾರೆ. ಬಳಿಕ ನಗರದ ಕೆ.ಎಸ್.ಆರ್.ಪಿ. ಮೈದಾನದಿಂದ ಮಾಲಿನಿ ಸಿಟಿವರೆಗೆ 10 ಕಿ.ಮೀ. ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಈ ಸಂದರ್ಭ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಜತೆಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಾಗಿ 8 ಕೋಟಿ ರೈತರ ಖಾತೆಗೆ 16000 ಕೋಟಿ ರೂ. ರೈತರ ಖಾತೆಗೆ ಬಿಡುಗಡೆ ಮಾಡಲಿದ್ದಾರೆ.
ಸಮಾವೇಶಕ್ಕಾಗಿ ಬೆಳಗಾವಿಯಲ್ಲಿ 10 ಎಕರೆಯಷ್ಟುವಿಸ್ತೀರ್ಣವಾದ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ನಿರ್ಮಿಸಲಾಗಿದೆ. 2 ಲಕ್ಷ ಜನರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮೋದಿ ಭೇಟಿಯಿಂದ ಶಿವಮೊಗ್ಗ ಮತ್ತು ಬೆಳಗಾವಿ ಪ್ರಮುಖ ನಗರಗಳಲ್ಲಿ ಬಿಜೆಪಿ ಬಾವುಟ, ಫ್ಲೆಕ್ಸ್ಗಳನ್ನು ಅಳವಡಿಸಲಾಗಿದ್ದು ಎಲ್ಲಡೆ ಕೇಸರಿಮಯವಾಗಿದೆ.
ಈ ತಿಂಗಳಲ್ಲಿ ಮೂರನೇ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ನರೇಂದ್ರ ಮೋದಿ, ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ದಿನಾಂಕ ಘೋಷಣೆಯಾಗಲಿರುವ ಹಿನ್ನೆಲೆಯಲ್ಲಿ ಇವರ ಭೇಟಿ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ.