ನ್ಯೂಸ್ ನಾಟೌಟ್ : ಹೊಟೇಲ್ ವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಕುಶಾಲನಗರ ಹಾಗೂ ಸುಂಟಿಕೊಪ್ಪ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಸುಂಟಿಕೊಪ್ಪದ ಬಿ.ಎಂ. ರಸ್ತೆಯ ಹೊಟೇಲ್ ವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ಸುಂಟಿಕೊಪ್ಪದ ನಿವಾಸಿಗಳಾದ ಅಹಮ್ಮದ್ ಶರೀಫ್ (34) ಹಾಗೂ ಫಯಾಜ್ ಎಂ.ಎಸ್. (34) ಬಂಧಿತರು. ಬಂಧಿತರಿಂದ 400 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಜಿಲ್ಲಾ ಪೊಲೀಸ್ ಕಚೇರಿ ಹಾಗೂ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಡಿವೈಎಸ್ ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಷಕ ಬಿ.ಜಿ.ಮಹೇಶ್, ಸುಂಟಿಕೊಪ್ಪ ಪಿಎಸ್ಐ ಶ್ರೀಧರ್ ಹಾಗೂ ಸಿಬ್ಬಂದಿಗಳ ತನಿಖಾ ತಂಡವನ್ನು ರಚಿಸಲಾಗಿತ್ತು.
ಈ ತಂಡವು ಶುಕ್ರವಾರ ಸುಂಟಿಕೊಪ್ಪದ ಬಿ.ಎಂ.ರಸ್ತೆಯಲ್ಲಿರುವ ಹೋಟೇಲ್ ನಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುವ ಕುರಿತು ಖಚಿತ ಮಾಹಿತಿ ಪಡೆದು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ. ಈ ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
ಅಲ್ಲದೆ ಜಿಲ್ಲೆಯ ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಹಾಗೂ ಸಹಕರಿಸುವಂತೆ ವರಿಷ್ಠಾಧಿಕಾರಿಯವರು ಸಾರ್ವಜನಿಕರಲ್ಲಿ ಕೋರಿದ್ದಾರೆ.