ನ್ಯೂಸ್ ನಾಟೌಟ್: ಸಾರಿಗೆ ನೌಕರರ ವೇತನ ಶೇಕಡ 15ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ನಾಳೆಯಿಂದ ಮುಷ್ಕರ ನಡೆಸುವುದಾಗಿ ಘೋಷಿಸಿದ್ದರು. ಆದರೆ ಇದೀಗ ನಾಳೆ ಕರೆ ನೀಡಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, 3 ವಾರಗಳ ಕಾಲ ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು ಮುಷ್ಕರದಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಮೂರು ವಾರಗಳ ಕಾಲ ಮುಷ್ಕರ ನಡೆಸಬಾರದು ಎಂದು ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ, ಅಶೋಕ್ ಎಸ್.ಕಿಣಗಿ ಅವರಿದ್ದ ಪೀಠ ಸಂಘಟನೆಗಳಿಗೆ ಸೂಚನೆ ನೀಡಿದೆ. ಸರ್ಕಾರಿ ನೌಕರರ ಸಮಾನ ವೇತನಕ್ಕಾಗಿ ಆಗ್ರಹಿಸಿ ಸಾರಿಗೆ ನೌಕರರು ಮಾ.24 ರಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಈ ಹಿನ್ನೆಲೆ ಸಾರಿಗೆ ಸಂಚಾರ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು, ಇದೀಗ ಹೈಕೋರ್ಟ್ ಮುಷ್ಕರಕ್ಕೆ ತಡೆಯಾಜ್ಞೆ ನೀಡಿದೆ ಎಂದು ವರದಿ ತಿಳಿಸಿದೆ.
ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಸಿ.ಜೆ ಪ್ರಸನ್ನ, ಬಿ ವರಾಳೆ ಅವರಿದ್ದ ಪೀಠ ಆದೇಶ ಹೊರಡಿಸಿದೆ. 3 ವಾರ ಯಾವುದೇ ಮುಷ್ಕರದಲ್ಲಿ ಭಾಗಿಯಾಗದಂತೆ ಸೂಚನೆ ನೀಡಿದೆ.
ಇಂದು ಹೆಚ್ ಎಂ ವೆಂಕಟೇಶ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠದ ಮುಂದೆ, ಸರ್ಕಾರದ ಪರ ವಕೀಲೆ ಪ್ರತಿಮಾ ಹೊನ್ನಾಪುರ, ಮಾರ್ಚ್ 20ರಂದು ಕಾರ್ಮಿಕ ಇಲಾಖೆಯ ಆಯುಕ್ತರು ಸಾರಿಗೆ ನೌಕರರ ಸಂಘಟನೆಗಳೊಂದಿಗೆ ಸಭೆ ನಡೆಸಿದ್ದರು. ಆದರೆ ಈ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ಏಪ್ರಿಲ್ 6ರಂದು ಮುಂದಿನ ಸಭೆಯನ್ನು ನಿಗದಿಪಡಿಸಲಾಗಿದೆ ಎಂದರು.
ಈ ಹಿಂದೆ ಮಾರ್ಚ್ 21ರಂದು ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಈ ವೇಳೆ 15% ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಹೀಗಾಗಿ ಮುಷ್ಕರ ಹಿಂಪಡೆಯಲಾಗಿತ್ತು. ಮುಷ್ಕರದ ಸಮಯದಲ್ಲಿ ವಜಾಗೊಂಡಿರುವ ನಾಲ್ಕು ನಿಗಮಗಳ ನೌಕರರನ್ನು ಯಾವುದೇ ಷರತ್ತುಗಳಿಲ್ಲದೆ ಮರುನೇಮಕಾತಿ ಮಾಡಿಕೊಳ್ಳುವುದು. ಮುಷ್ಕರದ ಸಮಯದಲ್ಲಿ ಸಾರಿಗೆ ನೌಕರರು ಮತ್ತು ಅವರ ಕುಟುಂಬಸ್ಥರ ಮೇಲೆ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವುದು. ಸಾರಿಗೆ ಸಂಸ್ಥೆಯಲ್ಲಿ ನಿವೃತ್ತಿಗೊಂಡ ನೌಕರರಿಗೆ ನೀಡಬೇಕಾಗಿರುವ ಬಾಕಿ ಹಣವನ್ನು ಕೂಡಲೇ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಲಾಗಿದೆ ಎಂದು ತಿಳಿದು ಬಂದಿದೆ.