ನ್ಯೂಸ್ ನಾಟೌಟ್: ಚುನಾವಣೆಗೆ ಮೊದಲು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿಎಂ ಆದ ಬಳಿಕ ಮೊದಲ ಸಚಿವ ಸಂಪುಟ ಸಭೆಯಲ್ಲೇ ಕಾಂಗ್ರೆಸ್ ಘೋಷಿಸಿದ ಐದು ಗ್ಯಾರೆಂಟಿಗಳಿಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ. ಪ್ರಣಾಳಿಕೆಯಲ್ಲಿ ನೀಡಿದ ಎಲ್ಲಾ ಭರವಸೆಗಳನ್ನು ಮುಂದಿನ ಐದು ವರ್ಷಗಳಲ್ಲಿ ಈಡೇರಿಸುತ್ತೇವೆ. ಐದು ಗ್ಯಾರೆಂಟಿಗಳನ್ನು ಈಡೇರಿಸಲು 50,000 ಕೋಟಿ ರೂಪಾಯಿಗಳು ಬೇಕಾಗುತ್ತದೆ. ರಾಜ್ಯವನ್ನು ಆರ್ಥಿಕ ದಿವಾಳಿಯನ್ನಾಗಿ ಮಾಡದೆ ಗ್ಯಾರೆಂಟಿ ಜಾರಿಗೊಳಿಸುತ್ತೇವೆ ಎಂದರು.
ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮೀ ಯೋಜನೆಯಡಿ ಮನೆಯೊಡತಿಗೆ ತಿಂಗಳಿಗೆ 2000, ಅನ್ನಭಾಗ್ಯ ಯೋಜನೆಯಡಿ ೧೦ ಕೆ.ಜಿ. ಅಕ್ಕಿ ಉಚಿತ, ಯುವನಿಧಿ, ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದರು.
ನಮ್ಮ ರಾಜ್ಯದ ಬಜೆಟ್ ಗಾತ್ರ 3 ಲಕ್ಷದ 10 ಸಾವಿರ ಕೋಟಿ ರೂಪಾಯಿಯಾಗಿದೆ. ಕಟ್ಟುನಿಟ್ಟಾಗಿ ತೆರಳಿ ವಸೂಲಿ ಮಾಡಿದರೆ ಆದಾಯ ಹೆಚ್ಚಳವಾಗುತ್ತದೆ. ಹಿಂದಿನ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಜಿಎಸ್ಟಿ ಮೂಲಕ ರಾಜ್ಯದಿಂದ ಕೇಂದ್ರಕ್ಕೆ ನಾಲ್ಕು ಲಕ್ಷ ಕೋಟಿಗೂ ಅಧಿಕ ತೆರಿಗೆ ಸಂದಾಯವಾಗುತ್ತದೆ. ಆದರೆ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾಗಿದ್ದ ಜಿಎಸ್ಟಿ ಪಾಲು 5495 ಕೋಟಿ ರೂ.ಬಂದಿಲ್ಲ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.