ನ್ಯೂಸ್ ನಾಟೌಟ್ :ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟು ಒಂದೊಂದೇ ಮಾಹಿತಿ ಹೊರಬೀಳುತ್ತಿದೆ.ಇದೀಗ ಇಬ್ಬರು ಮಾಸ್ಟರ್ಮೈಂಡ್ಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೂರಕ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.ಇದರಲ್ಲಿ ಪ್ರಮುಖ ಆರೋಪಿಗಳಾದ ತುಫೈಲ್ ಎಂ ಎಚ್ ಹಾಗೂ ಮೊಹಮ್ಮದ್ ಜಬೀರ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿದ್ದು, ಒಟ್ಟು 21 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದಂತಾಗಿದೆ.
ಚಾರ್ಜ್ಶೀಟ್ ಸಲ್ಲಿಸಲಾದ ತುಫೈಲ್ ಕೊಡಗು ಮೂಲದವನೆಂದು ತಿಳಿದು ಬಂದಿದೆ.ಈತ ಪಿಎಫ್ಐ ಸರ್ವೀಸ್ ಟೀಂನ ಸಕ್ರಿಯ ಸದಸ್ಯನಾಗಿದ್ದು, ಮಾಸ್ಟರ್ ಟ್ರೈನರ್ ಆಗಿಯೂ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ದಕ್ಷಿಣ ಕನ್ನಡದ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ನಲ್ಲಿ ಪಿಎಫ್ಐ ಸದಸ್ಯರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದ್ದ ಎಂಬ ಮಾಹಿತಿಯೂ ಹೊರಬಿದ್ದಿದೆ.ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳಿಗೆ ಈತ ತಮಿಳುನಾಡಿನ ಈರೋಡ್,ಕೊಡಗು,ಮೈಸೂರುಗಳಲ್ಲಿ ಆಶ್ರಯ ನೀಡಿದ್ದನೆಂದು ತಿಳಿದು ಬಂದಿದೆ. ಮತ್ತೋರ್ವ ಆರೋಪಿ ಮೊಹಮ್ಮದ್ ಜಬೀರ್ ದಕ್ಷಿಣ ಕನ್ನಡ ಜಿಲ್ಲೆಯ ಪಿಎಫ್ಐ ಜಿಲ್ಲಾಧ್ಯಕ್ಷನಾಗಿದ್ದು ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಚು ರೂಪಿಸಿ ನಡೆದಿದ್ದ ಸಭೆಗಳಲ್ಲಿ ಭಾಗಿಯಾಗಿದ್ದ ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.
ಕಳೆದ ವರ್ಷ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಎಂಬವರ ಮೇಲೆ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ಬೈಕ್ನಲ್ಲಿ ಆಗಮಿಸಿದ ಮುಸುಕುಧಾರಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರು.ಪ್ರವೀಣ್ ಹತ್ಯೆ ಖಂಡಿಸಿ ಹಿಂದೂ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದರು.ಹತ್ಯೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆಯು ವಿಶೇಷ ತಂಡಗಳನ್ನು ರಚಿಸಿತ್ತು. ನಂತರ ಕೊಲೆಗೆ ಸಹಕಾರ ನೀಡಿದ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು.