ನ್ಯೂಸ್ ನಾಟೌಟ್ : ಅನುಕಂಪದ ಆಧಾರದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ನೇಮಕಗೊಂಡಿದ್ದ ದ.ಕ. ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿಯನ್ನು ಕೆಲಸದಿಂದ ತೆಗೆದುಹಾಕಲಾಗಿದೆ.ಇದೀಗ ರಾಜ್ಯದಾದ್ಯಂತ ಈ ಕುರಿತು ಚರ್ಚೆಗಳು ನಡಿತ್ತಿದ್ದು,ಆರೋಪ ಪ್ರತ್ಯಾರೋಪಗಳು ಕೇಳಿ ಬಂದಿದೆ.ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಹೇಳಿಕೊಂಡರೆ, ಇತ್ತ ಕಾಂಗ್ರೆಸ್, ಹಿಂದಿನ ಸರಕಾರದ ಆದೇಶದಂತೆ ಅವರ ಕೆಲಸಕ್ಕೆ ಕತ್ತರಿ ಬಿದ್ದಿದೆ ಎಂದು ಹೇಳಿಕೊಳ್ಳುತ್ತಿದೆ.
ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮಾತನಾಡುತ್ತಾ ಅದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ. ಸರ್ಕಾರಿ ಕೆಲಸದಿಂದ ಬಿಡುಗಡೆಗೊಳಿಸಿರುವ ಕುರಿತಂತೆ ಆದೇಶದ ಬಗ್ಗೆ ನೂತನ ಕುಮಾರಿ ಅವರು ಗಮನಕ್ಕೆ ತಂದಿದ್ದಾರೆ. ಅವರನ್ನು ಮತ್ತೆ ಮುಂದುವರಿಸುವ ಬಗ್ಗೆ ತಕ್ಷಣವೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.
ಇನ್ನೂ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಭ್ರಷ್ಟಾಚಾರವೇ ಕುಲದೈವ ಎಂದು ನಂಬಿರುವ ಬಿಜೆಪಿಗೆ ನೀತಿ ನಿಯಮಗಳನ್ನು ಅಧ್ಯಯನ ಮಾಡಲು ಆಸಕ್ತಿ ಮತ್ತು ಸಮಯ ಇರಲು ಸಾಧ್ಯವೇ? ಎಂದು ಹೇಳಿದೆ. ನಿಯಮದ ಪ್ರಕಾರ ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ, ಬದುಕಿಗೆ ಶಾಶ್ವತ ದಾರಿ ತೋರಿಸದೆ ಇಂತಹ ಪೇಪರ್ ಚಾಕ್ಲೆಟ್ ನೀಡುವ ಮೂಲಕ ಬಿಜೆಪಿ ಪ್ರವೀಣ್ ಪತ್ನಿಗೆ ದ್ರೋಹವೆಸಗಿದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಆದೇಶದಲ್ಲಿ ಗುತ್ತಿಗೆ ಆಧಾರದಲ್ಲಿ ಹಿರಿಯ ಸಹಾಯಕ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಲಾಗಿತ್ತು.ಅದರಂತೆ ಅವರು ಕೆಲಸವನ್ನು ಮಾಡಿದ್ದಾರೆ. ಈ ಹುದ್ದೆ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಇಲ್ಲವೇ ಮುಂದಿನ ಆದೇಶ ವರೆಗೆ ಎಂದು ನಮೂದಿಸಲಾಗಿತ್ತು.ಹಾಗಾಗಿ ಈ ಎಡವಟ್ಟಾಗಿದೆ.ಆ ಆದೇಶದಲ್ಲಿ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಎಂದಿದ್ದರೂ ನೂತನ ಕುಮಾರಿ ಅವರ ಅಪೇಕ್ಷೆ ಮೇರೆಗೆ ಅವರನ್ನು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿತ್ತು ಎಂದು ಹೇಳಿದೆ.