ನ್ಯೂಸ್ ನಾಟೌಟ್: ರಾಜ್ಯದಲ್ಲಿ ಇನ್ನು ನಾಲ್ಕು ದಿನ ಭಾರಿ ಪ್ರಮಾಣದಲ್ಲಿ ಮಳೆಯಾಗಲಿದೆ. ಅಲ್ಲದೆ, 11 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದೆ. ಈ ಹಿನ್ನೆಲೆಯಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ರಾಜ್ಯದ ಹಲವು ಕಡೆ ಗುಡುಗು, ಮಿಂಚಿನ ಸಹಿತ ಮಳೆಯಾಗಲಿದೆ. ಜತೆಗೆ ಉತ್ತರ ಒಳನಾಡಿನಲ್ಲಿ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಬಿರುಗಾಳಿ ವೇಗವು ಗಂಟೆ 40-45 ಕಿ.ಮೀ.ನಿಂದ 55 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಅಂದಾಜಿಸಲಾಗಿದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.