ನ್ಯೂಸ್ ನಾಟೌಟ್: ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಮೇಕೆದಾಟುವಿನಿಂದ ಬೆಂಗಳೂರು ತನಕ ಕಾಂಗ್ರೆಸ್ ಪಾದಯಾತ್ರೆ ಮಾಡಿತ್ತು.
ಮೇಕೆದಾಟು ಪಾದಯಾತ್ರೆ ನೇತೃತ್ವ ವಹಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಈಗ ಕರ್ನಾಟಕದ ಉಪ ಮುಖ್ಯಮಂತ್ರಿ ಮಾತ್ರವಲ್ಲದೆ ಜಲಸಂಪನ್ಮೂಲ ಖಾತೆ ಸಚಿವರು ಸಹ ಅವರೇ ಆಗಿದ್ದಾರೆ.
ಈ ಸಂಬಂಧ ಗುರುವಾರ(ಜೂನ್ ೧) ಡಿ. ಕೆ. ಶಿವಕುಮಾರ್ ಸರಣಿ ಟ್ವೀಟ್ ಮಾಡಿದ್ದಾರೆ. ‘ನಾನು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ. ನಿಮ್ಮಲ್ಲಿ ಹೃದಯ ಶ್ರೀಮಂತಿಕೆ ಇದೆ, ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ. ಒಬ್ಬರಿಗೊಬ್ಬರು ಸಹಕರಿಸುತ್ತಾ ಜೊತೆಯಾಗಿ ಸಾಗೋಣ’ ಎಂದು ಕರೆ ನೀಡಿದ್ದಾರೆ.
‘ಮೇಕೆದಾಟು ಯೋಜನೆಗೆ ಹಿಂದಿನ ಸರ್ಕಾರ ಒಂದು ಸಾವಿರ ಕೋಟಿ ರೂ. ಘೋಷಿಸಿದೆ ಆದರೆ ಖರ್ಚು ಮಾಡಿಲ್ಲ. ಯೋಜನೆಯನ್ನು ಸಾಕಾರಗೊಳಿಸಲು ಆ ಹಣ ಬಳಕೆಯಾಗಲಿದೆ. ತಮಿಳುನಾಡಿನ ನಮ್ಮ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ. ಅವರೂ ನಮ್ಮ ಅಣ್ಣತಮ್ಮಂದಿರಂತೆ’ ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ, ‘ಕರ್ನಾಟದಲ್ಲಿ ನೆಲೆಸಿರುವ ತಮಿಳಿಗರು ಹಾಗೂ ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರು ಕಾವೇರಿ ನೀರು ಕುಡಿಯುತ್ತಿದ್ದಾರೆ. ಕೋರ್ಟು, ಕಚೇರಿ ಅಲೆದದ್ದು ಸಾಕು. ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೂ ಅನುಕೂಲವಾಗಲಿದೆ. ಕಾವೇರಿ ಪಾತ್ರದಲ್ಲಿರುವ ರೈತರಿಗೆ ನೀರಾವರಿ ಹಾಗೂ ಶ್ರೀಸಾಮಾನ್ಯರಿಗೆ ಕುಡಿಯುವ ನೀರು ಎರಡೂ ಲಭಿಸಲಿದೆ’ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮೇಕೆದಾಟು ಯೋಜನೆ ವಿಚಾರದಲ್ಲಿ ಡಿ. ಕೆ. ಶಿವಕುಮಾರ್ ನಿಲುವಿಗೆ ಯೋಜನೆ ವಿರೋಧಿಸುತ್ತಿರುವ ತಮಿಳುನಾಡು ಸರ್ಕಾರ ಪ್ರತಿಕ್ರಿಯೆ ನೀಡಿತ್ತು. “ಯೋಜನೆ ವಿಚಾರದಲ್ಲಿ ಅಕ್ರಮಣಕಾರಿಯಾಗಿ ವರ್ತಿಸಬೇಡಿ” ಎಂದು ರಾಜ್ಯದ ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಡಿ. ಕೆ. ಶಿವಕುಮಾರ್ಗೆ ಸಲಹೆ ನೀಡಿದ್ದರು.
“ಅಧಿಕಾರಕ್ಕೆ ಬಂದು ಕೆಲವೇ ದಿನಗೂ ಆಗಿವೆ. ಡಿ. ಕೆ. ಶಿವಕುಮಾರ್ ಅಕ್ರಮಣಕಾರಿಯಾಗಿ ವರ್ತಿಸುತ್ತಿರುವುದು ಆಶ್ಚರ್ಯ ಹುಟ್ಟಿಸಿದೆ. ಮೇಕೆದಾಟು ಯೋಜನೆ ಕುರಿತು ಅಧಿಕಾರಿಗಳು ಅವರಿಗೆ ಸರಿಯಾದ ಮಾಹಿತಿ ನೀಡಿಲ್ಲ” ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.