ನ್ಯೂಸ್ ನಾಟೌಟ್: ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ಆಗಿದ್ದ ಆಮ್ಮ ಜನಕ ದುರಂತ ಸೇರಿದಂತೆ ಬಿಜೆಪಿ ಅವಧಿಯಲ್ಲಿ ಆಗಿದ್ದ ಎಲ್ಲ ಹಗಣಗಳ ಮರು ತನಿಖೆ ನಡೆಸೋದು ಖಚಿತ ಎಂದು CM ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವಿಚಾರವನ್ನು ಟ್ವಿಟ್ಟರ್ನಲ್ಲಿ ಸರಣಿ ಟ್ವಿಟ್ ಮಾಡುವ ಮೂಲಕ ಸಿದ್ದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಸರ್ಕಾರದ ಹಗರಣಗಳ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, ಶೇ 40ರಷ್ಟು ಕಮಿಷನ್, ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪಿಎಸ್ಐ ನೇಮಕಾತಿ ಹಗರಣ ಹಾಗೂ ಬಿಟ್ ಕಾಯಿನ್ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು’ ಎಂದು ತಿಳಿಸಿದ್ದಾರೆ.
‘ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರು ತನಿಖೆ ನಡೆಸಲಾಗುವುದು. ಅಂದಿನ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು, ಆದರೆ ಸತ್ತವರ ಸಂಖ್ಯೆ ಮೂವತ್ತಕ್ಕೂ ಹೆಚ್ಚಿತ್ತು. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಮೃತರ ಕುಟುಂಬಗಳಿಗೆ ನ್ಯಾಯ ಕೊಡಿಸುತ್ತೇವೆ’ ಎಂದು ತಿಳಿಸಿದ್ದಾರೆ.
‘ಕೊಟ್ಟ ಮಾತಿನಂತೆ ಒಂದು ಗ್ಯಾರಂಟಿಯನ್ನು ಈಗಾಗಲೇ ಜಾರಿ ಮಾಡಿದ್ದೇವೆ. ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 15ರ ನಂತರ ಜಾರಿ ಮಾಡಲಾಗುವುದು. ಈ ಸಂಬಂಧ ಈಗಾಗಲೇ ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ. ಅರ್ಜಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಯೋಜನೆಯನ್ನು ಜಾರಿಗೆ ಕೊಡಲಾಗುವುದು’ ಎಂದು ಹೇಳಿದ್ದಾರೆ.
‘ಅನ್ನ ಭಾಗ್ಯ ಕಾರ್ಯಕ್ರಮಕ್ಕೆ 5 ಕೆ.ಜಿ ಅಕ್ಕಿ ನೀಡುತ್ತಿದ್ದೇವೆ. ಒಟ್ಟು 10 ಕೆ.ಜಿ ಅಕ್ಕಿ ನೀಡುವುದಾಗಿ ಹೇಳಿದ್ದೆವು. 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅಗತ್ಯವಿದೆ. ಅಷ್ಟು ಅಕ್ಕಿ ನಮಗೆ ದೊರೆಯುತ್ತಿಲ್ಲ. ಕೇಂದ್ರ ಸರ್ಕಾರದ ಅಧೀನದ ಎಫ್ಸಿಐ ಮೊದಲಿಗೆ ಅಕ್ಕಿ ನೀಡುವುದಾಗಿ ಒಪ್ಪಿ ನಂತರ ಕೊಡಲಾಗುವುದಿಲ್ಲ ಎಂದು ಪತ್ರ ಬರೆದಿದ್ದಾರೆ. ಅಕ್ಕಿಯ ದಾಸ್ತಾನು ಇದ್ದರೂ ಕೊಡುತ್ತಿಲ್ಲ. ಈ ಬಗ್ಗೆ ಆಹಾರ ಇಲಾಖೆ ಮೂಲಕ ಹೇಳಿ ಬರೆಸಿದ್ದಾರೆ. ಇದು ಕೇಂದ್ರ ಬಿಜೆಪಿ ಸರ್ಕಾರದ ಷಡ್ಯಂತ್ರ’ ಎಂದು ದೂರಿದ್ದಾರೆ.