ನ್ಯೂಸ್ ನಾಟೌಟ್: ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸಯ್ಯದ್ ಸುಹೇಲ್, ಉಮರ್, ಜುನೇದ್ ಮುದಾಶೀರ್, ಜಾಹಿದ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಭಾರಿ ಪ್ರಮಾಣದ ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರು ರಾಜ್ಯದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. 2017ರ ಅಕ್ಟೋಬರ್ನಲ್ಲಿ ಬೆಂಗಳೂರಿನ ಆರ್.ಟಿ.ನಗರದಲ್ಲಿ ನಡೆದಿದ್ದ ಮೂವರ ಕಿಡ್ನ್ಯಾಪ್, ಓರ್ವನ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಆರೋಪಿಗಳು, ಪರಪ್ಪನ ಅಗ್ರಹಾರ ಜೈಲಿನಿಂದ ಉಗ್ರರ ಜೊತೆಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದ್ದು, ಈ ಬಗ್ಗೆ ಐದು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಆರ್ ಟಿ ನಗರ ಕೊಲೆ ಕೇಸ್ನ ಆರೋಪಿಗಳು ಜೈಲಿನಲ್ಲಿ ಉಗ್ರರ ಜೊತೆಗೆ ಸಂಪರ್ಕ ಹೊಂದಿದ್ದಾರೆ. ನಂತರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಿಧ್ವಂಸಕ ಕೃತ್ಯಕ್ಕೆ ತಯಾರಿ ನಡೆಸಿದ್ದರು. ಇದಕ್ಕೆ ಬೇಕಾಗುವ ಕಚ್ಚಾ ವಸ್ತುಗಳನ್ನು ಒಗ್ಗೂಡಿಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ಕೇಂದ್ರ, ಸಿಸಿಬಿ ಮಾಹಿತಿ ಸಂಗ್ರಹ ಮಾಡಿತ್ತು. ಮಾಹಿತಿಯನ್ವಯ ಸಿಸಿಬಿ ಜೊತೆಗೆ ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿ ವಿಚಾರಣೆ ನಡೆಸಿದೆ.
ಇನ್ನು ಹಲವಾರು ಮಂದಿ ಕೃತ್ಯದಲ್ಲಿ ಭಾಗಿಯಾಗಲು ತಯಾರಿ ನಡೆಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಮಡಿವಾಳ ಟೆಕ್ನಿಕಲ್ ಸೆಲ್ನಲ್ಲಿ ಬಂಧಿತರ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಶಂಕಿತರನ್ನು ಆರ್ ಟಿ ನಗರ, ಹೆಬ್ಬಾಳ, ಡಿಜೆ ಹಳ್ಳಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದು, ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.