ನ್ಯೂಸ್ ನಾಟೌಟ್ : ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಗುರುವಾರ (ಜುಲೈ 13 ) ಬಂಧಿಸಿದ್ದಾರೆ.
ಸಕ್ರಿಯ ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಬಂಧಿತ ಆರೋಪಿಗಳಾಗಿದ್ದಾರೆ.
ಇವರಿಂದ ಸಾಗಾಟಕ್ಕೆ ಬಳಸಿದ ಮೂರು ವಾಹನಗಳು, 6 ದನ ಮತ್ತು 2 ಗಂಡು ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯ ಎಸ್ ಐ ಅನಿಲ್ ಕುಮಾರ್ ನೇತೃತ್ವದ ತಂಡ ಜು.12ರಂದು ರಾತ್ರಿ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿತ್ತು. ರಾತ್ರಿ 8.45ರ ಸುಮಾರಿಗೆ ಉಜಿರೆ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಎರಡು ಪಿಕಪ್ ಸೇರಿದಂತೆ ಮೂರು ವಾಹನಗಳಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ ಎನ್ನಲಾಗಿದೆ.
ವಾಹನದಲ್ಲಿದ್ದವರನ್ನು ಪೊಲೀಸರು ವಿಚಾರಿಸಿದಾಗ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವಾಹನ ಸಹಿತ ಜಾನುವಾರುಗಳನ್ನು ವಶಪಡಿಸಿಕೊಂಡು, ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Follow us for more updates:
FB PAGE : https://www.facebook.com/NewsNotOut2023
Insta : https://www.instagram.com/newsnotout/
Tweet : https://twitter.com/News_Not_Out
YouTube : https://www.youtube.com/@newsnotout8209