ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಕಾರಣ ಮಂಗಳೂರು ವಿಶ್ವ ವಿದ್ಯಾಲಯದ ಜುಲೈ 25ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ಮರು ನಿಗದಿಪಡಿಸಿ ಎಲ್ಲಾ ಸಂಯೋಜಿತ ಕಾಲೇಜುಗಳಿಗೆ ಶೀಘ್ರದಲ್ಲಿ ತಿಳಿಸಲಾಗುವುದು. ಈ ಹಿಂದೆ ಪ್ರಕಟಿಸಿದ ಉಳಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ವಿವಿ ಸೋಮವಾರ ಪ್ರಕಟಣೆ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯ ಎಲ್ಲ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಆದರೆ ಈ ಸಮಯದಲ್ಲಿಯೂ ಮಂಗಳೂರು ವಿವಿ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದಕ್ಕೆ ತೀವ್ರ ತೊಂದರೆಯಾಗಿತ್ತು. ಅಲ್ಲದೆ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜು ವಿದ್ಯಾರ್ಥಿಗಳು ಜಲಾವೃತಗೊಂಡ ರಸ್ತೆಯಲ್ಲಿಯೇ ಸಂಚರಿಸಿ ಪರೀಕ್ಷಾ ಕೇಂದ್ರಗಳಿಗೆ ತಲುಪಿದ ಚಿತ್ರಗಳು ಮಾಧ್ಯಮಗಳಲ್ಲಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ವಿವಿ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.