ನ್ಯೂಸ್ ನಾಟೌಟ್: ರಾಜ್ಯದಲ್ಲಿ ಮುಂಗಾರು ಚುರುಕು ಪಡೆದಿದ್ದು, ಪಶ್ಚಿಮಘಟ್ಟ ಪ್ರದೇಶಗಳಲ್ಲಿ ನಿನ್ನೆಯಿಂದ ಧಾರಾಕಾರ ಮಳೆಯಾಗುತ್ತಿದ್ದು, ದಕ್ಷಿಣಕನ್ನಡ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ, ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳಗೊಂಡಿದೆ. ಧರ್ಮಸ್ಥಳದಲ್ಲಿ ಸ್ನಾನಘಟ್ಟ ಮುಳುಗಡೆಯಾಗಿದ್ದು, ಯಾತ್ರಿಗಳಿಗೆ ನೀರಿಗಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅದೇ ರೀತಿ ಕುಮಾರಧಾರ ನದಿಯಲ್ಲೂ ನೀರಿನ ಮಟ್ಟ ಹೆಚ್ಚಳಗೊಂಡು ನಿನ್ನೆಯಿಂದ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ. ಯಾತ್ರಿಗಳಿಗೆ ಸ್ನಾನಘಟ್ಟ ಪ್ರದೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಸ್ಥಳದಲ್ಲಿ ಪೊಲೀಸರು ಮತ್ತು ಗೃಹರಕ್ಷಕ ದಳದವರನ್ನು ನಿಯೋಜನೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನೆಲ್ಲಿಬಿಡು ಸೇತುವೆ ಮುಳುಗಡೆಯಾಗಿದೆ. ಕಳಸದಿಂದ ಉಡುಪಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169 ಬಂದ್ ಆಗಿದೆ. ಕಳಸದಿಂದ ಕುದುರೆಮುಖ ಮಾರ್ಗವಾಗಿ ಉಡುಪಿ ಜಿಲ್ಲೆಗೆ ಸಂಪರ್ಕಿಸುವ ಸೇತುವೆ ಬಂದ್ ಆಗಿದೆ. ಹೀಗಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ಪ್ರವಾಹದ ಮಟ್ಟ ಮೀರಿ ಜಾಂಬಳೆ ಹೊಳೆ ಹರಿಯುತ್ತಿದೆ.
ಇತ್ತ ಕಾಫಿನಾಡು ಚಿಕ್ಕಮಗಳೂರಲ್ಲೂ ವರುಣನ ಅಬ್ಬರ ಜೋರಾಗಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಕಳಸ ತಾಲೂಕಿನ ಹೆಬ್ಬೊಳೆ ಸೇತುವೆ ಮುಳುಗಡೆಯಾಗಿದೆ. ಇದರಿಂದ ಕಳಸ-ಹೊರನಾಡು ಸಂಪರ್ಕ ಬಂದ್ ಆಗಿ ಮಲೆನಾಡಿನ ಜನತೆ ಕಂಗಾಲಾಗಿದ್ದಾರೆ. ಸಂಪರ್ಕ ಕಳೆದುಕೊಂಡ ಹತ್ತಾರು ಹಳ್ಳಿಯ ಜನ ಅನ್ಯ ಮಾರ್ಗವಿದ್ದರೂ 8-10 ಕಿ.ಮೀ. ಸುತ್ತು ಬಳಸಿ ಸಂಚರಿಸಬೇಕಾಗಿದೆ.