ನ್ಯೂಸ್ ನಾಟೌಟ್: ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠಕ್ಕೆ ಚಿತ್ರದುರ್ಗದ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ. ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿದ್ದ ಕರ್ನಾಟಕ ಸರ್ಕಾರದ ಕ್ರಮವನ್ನು ರದ್ದು ಪಡಿಸಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಎಚ್. ಏಕನಾಥ್ ಎಂಬುವರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರಿದ್ದ ವಿಭಾಗೀಯ ಪೀಠ ತಾತ್ಕಾಲಿಕ ಆಡಳಿತಾಧಿಕಾರಿ ನೇಮಿಸಿ ಆದೇಶಿಸಿದೆ. ಅಲ್ಲದೆ, ಮಠದ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಲಯದ ನ್ಯಾಯಾಧೀಶರು ಮಂಗಳವಾರ ಬೆಳಗ್ಗೆ ಅಧಿಕಾರ ಸ್ವೀರಿಸಲು ನ್ಯಾಯಪೀಠ ಸೂಚನೆ ನೀಡಿದೆ.
ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಅಂದಿನ ಸರ್ಕಾರ ನಿವೃತ್ತ ಐಎಎಸ್ ಅಧಿಕಾರಿ ಪಿ. ಎಸ್. ವಸ್ತ್ರದ ಅವರನ್ನು 2022ರ ಡಿಸೆಂಬರ್ 13ರಂದು ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ವಸ್ತ್ರದ 2022ರ ಡಿಸೆಂಬರ್ 15ರಂದು ಅಧಿಕಾರ ಸ್ವೀಕರಿಸಿದ್ದರು.