ನ್ಯೂಸ್ ನಾಟೌಟ್: ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಕೌಶಿಕ್ ದೇವಾಡಿಗ(26) ಮತ್ತು ಮಹಮ್ಮದ್ ಇರ್ಷಾದ್ ಅಕುಡು(29) ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು 9 ಗ್ರಾಂ ತೂಕದ ರೂ. 45,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್-2, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ. 95,500/-ಎಂದು ಅಂದಾಜಿಸಲಾಗಿದೆ.
ಈ ಇಬ್ಬರು ಯುವಕರು ಮೂಡುಬಿದಿರೆ ತಾಲೂಕಿನ ಮೂಲ್ಕಿ ಕಿನ್ನಿಗೋಳಿ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಬಸ್ ಸ್ಟಾಂಡ್ ಬಳಿ ಅಕ್ರಮವಾಗಿ ಮಾದಕ ವಸ್ತು (MDMA ) ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ.ಎ. ಹೆಗಡೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳ ಪೈಕಿ ಕೌಶಿಕ್ ಎಂಬಾತನ ವಿರುದ್ಧ ಈ ಹಿಂದೆ ಗಾಂಜಾ ಸೇವನೆ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಹಾಗೂ ಮೊಬೈಲ್ ಸುಲಿಗೆ ಮಾಡಿದ ಪ್ರಕರಣ ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ಮೊಹಮ್ಮದ್ ಇರ್ಷಾದ್ ಎಂಬಾತನ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣವೊಂದು ದಾಖಲಾಗಿರುತ್ತದೆ. ಆರೋಪಿಗಳ ವಿರುದ್ಧ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್.ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.