ನ್ಯೂಸ್ ನಾಟೌಟ್: ಕಾಲೇಜು ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಮೂವರು ವಿದ್ಯಾರ್ಥಿನಿಯರಿಗೆ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ ನಡೆದಿತ್ತು. ಈ ಬಗ್ಗೆ ಭಾರಿ ಚರ್ಚೆಗಳು ನಡೆದವು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ವಿದ್ಯಾರ್ಥಿನಿಯರ ಮೇಲೆ ದೂರು ದಾಖಲಾಗಿತ್ತು. ಶುಕ್ರವಾರ ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರಾಗಿ ವಿದ್ಯಾರ್ಥಿನಿಯರು ವಕೀಲರ ಮೂಲಕ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ತನಿಖಾಧಿಕಾರಿಯ ತನಿಖೆಗೆ ಸಹಕರಿಸಬೇಕು, ವಿಚಾರಣೆಗೆ ತಪ್ಪದೆ ಹಾಜರಾಗಬೇಕು ಹಾಗೂ ತಲಾ ₹ 20 ಸಾವಿರ ಮೌಲ್ಯದ ಬಾಂಡ್ ಸಲ್ಲಿಸಬೇಕು ಎಂಬ ಷರತ್ತಿನೊಂದಿಗೆ ಜಾಮೀನು ಮಂಜೂರು ಮಾಡಿದರು.
ಈ ಎಲ್ಲ ಬೆಳವಣಿಗೆಗಳ ನಡುವೆ ಮತ್ತೊಂದೆಡೆ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ. ಪೊಲೀಸರ ತನಿಖೆಯಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡುತ್ತಿದ್ದು ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ. ಬಿಜೆಪಿ ಕಚೇರಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು.