ನ್ಯೂಸ್ ನಾಟೌಟ್: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ಒಂದೂವರೆ ತಿಂಗಳ ಮಗು ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿದೆ.
ಮಗುವಿನ ಸಾವಿಗೆ ಆಸ್ಪತ್ರೆಯ ನಿರ್ಲಕ್ಷ್ಯವೇ ಕಾರಣವೆಂದು ಮಗುವಿನ ಹೆತ್ತವರು ಆರೋಪಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಯ ಅಂಶಿಕಾ (1.5 ತಿಂಗಳು) ಎಂಬ ಹೆಣ್ಣು ಮಗುವಿಗೆ ಕಫ ಆಗಿತ್ತು. ಚಿಕಿತ್ಸೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರಿಲ್ಲದ ಸಂದರ್ಭ ನರ್ಸ್ ಇಂಜೆಕ್ಷನ್ ನೀಡಿದ ಬಳಿಕ ಮಗು ಸಾವನ್ನಪ್ಪಿದೆ ಎಂದು ಮನೆಮಂದಿ ಆರೋಪಿಸಿದ್ದಾರೆ.
ಈ ಬಗ್ಗೆ ಮಾಹಿತಿ ಪಡೆದ ಬೆಳ್ತಂಗಡಿಯ ಮಾಜಿ ಶಾಸಕ ಆಸ್ಪತ್ರೆಗೆ ದೌಡಾಯಿಸಿ ಆಸ್ಪತ್ರೆಯ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಗುವಿನ ತಂದೆಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.