ನ್ಯೂಸ್ ನಾಟೌಟ್: ಭೂತಾಯಿ ಟ್ರಸ್ಟ್ ವತಿಯಿಂದ ಮಂಡ್ಯದ ಹಲ್ಲೆಗೆರೆಯಲ್ಲಿ ನಿರ್ಮಿಸಲಾಗುತ್ತಿರುವ ಅಂತರರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರದ ಶಂಕುಸ್ಥಾಪನೆಗೆ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಹಾಗೂ ಅವರ ಪತ್ನಿ ಮಿಶೆಲ್ ಒಬಾಮಾ ಬರುತ್ತಿದ್ದಾರೆ. ಇವರೊಂದಿಗೆ ಟಿಬೆಟಿಯನ್ ಧರ್ಮಗುರು ದಲೈಲಾಮಾ ಕೂಡ ಜೊತೆಯಾಗಲಿದ್ದಾರೆ ಎಂದು ವರದಿ ತಿಳಿಸಿದೆ.
ಡಿಸೆಂಬರ್ ತಿಂಗಳಲ್ಲಿ ಯೋಗ ಮತ್ತು ಧ್ಯಾನ ಕೇಂದ್ರದ ಶಂಕುಸ್ಥಾಪನೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಇವರೆಲ್ಲರೂ ಭಾಗವಹಿಸಲಿದ್ದಾರೆ. ಈ ಕುರಿತು ಟ್ರಸ್ಟ್ ಅಧ್ಯಕ್ಷ, ಅಮೆರಿಕದ ವೈದ್ಯ ಡಾ. ಲಕ್ಷ್ಮಿನರಸಿಂಹ ಮೂರ್ತಿ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ, ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ, ಶಾಸಕರಾದ ರವಿಕುಮಾರ್ ಗಣಿಗ, ಬಾಬು ಬಂಡಿಸಿದ್ದೇಗೌಡ ನೇತೃತ್ವದ ತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಒಬಾಮ ದಂಪತಿ ಆಗಮಿಸುತ್ತಿರುವ ಕಾರಣ ಹಲ್ಲೆಗೆರೆಯಲ್ಲಿ ಹೆಲಿಪ್ಯಾಡ್ ವ್ಯವಸ್ಥೆ, ರಸ್ತೆ, ಕುಡಿಯುವ ನೀರು ಮುಂತಾದ ಸೌಕರ್ಯಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ʼಅಂತರರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರವು ಜಿಲ್ಲೆಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಹೆಸರುವಾಸಿಯಾಗಲಿದೆʼ ಎಂದು ಅವರು ಈ ಕೇಂದ್ರದಲ್ಲಿ ನಡೆಯುವ ಕಾರ್ಯಚಟುವಟಿಕೆಗಳ ಬಗ್ಗೆ ಸುದೀರ್ಘವಾಗಿ ವಿವರಿಸಿದ್ದಾರೆ.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ʼಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆದು ಸಂಬಂಧಪಟ್ಟ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತೇನೆʼ ಎಂದು ಭರವಸೆ ನೀಡಿದ್ದಾರೆ.
ಅಮೆರಿಕದ ಹಾಲಿ ಅಧ್ಯಕ್ಷ ಜೋ ಬೈಡನ್ ಅವರ ವೈದ್ಯಕೀಯ ಸಲಹೆಗಾರ ಡಾ. ವಿವೇಕ್ ಮೂರ್ತಿ ಅವರು ಭಾರತೀಯ ಮೂಲದವರು. ಡಾ.ವಿವೇಕ ಮೂರ್ತಿ ಅಮೆರಿಕದ ಹಿಂದಿನ ಅಧ್ಯಕ್ಷ ಬರಾಕ್ ಒಬಾಮಾ ಅವರಿಗೂ ವೈದ್ಯಕೀಯ ಸಲಹೆಗಾರರಾಗಿದ್ದರು.
ಡಾ. ವಿವೇಕ್ ಮೂರ್ತಿ ತಂದೆ, ಅನಿವಾಸಿ ಭಾರತೀಯ ಡಾ. ಲಕ್ಷ್ಮಿನರಸಿಂಹ ಮೂರ್ತಿ (ಎಲ್.ಎನ್.ಮೂರ್ತಿ) ಅವರು ತಮ್ಮ ಮಾತೃಭೂಮಿಯ ಅಭ್ಯುದಯಕ್ಕೆ ಪಣ ತೊಟ್ಟಿದ್ದಾರೆ. ಅವರ ಸ್ವಂತ ಊರು ಮಂಡ್ಯ ಜಿಲ್ಲೆಯ ಹಲ್ಲೆಗೆರೆಯಾಗಿದ್ದು, ಇಲ್ಲಿ 13 ಎಕರೆ ಪಿತ್ರಾರ್ಜಿತ ಜಮೀನಿದೆ. ಅದರಲ್ಲಿ ಭೂತಾಯಿ ಟ್ರಸ್ಟ್ನಿಂದ ಸುಮಾರು 80 ಕೋಟಿ ರೂ. ವೆಚ್ಚದಲ್ಲಿ ಅಂತರರಾಷ್ಟ್ರೀಯ ಮಟ್ಟದ ಯೋಗ ಮತ್ತು ಧ್ಯಾನ ಕೇಂದ್ರ ತೆರೆಯಲು ಮುಂದಾಗಿದ್ದಾರೆ.