ನ್ಯೂಸ್ ನಾಟೌಟ್ : ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ, ಡಾ.ಸರ್ವಪಲ್ಲಿ ರಾಧಕೃಷ್ಣನ್ ಜನ್ಮದಿನೋತ್ಸವ ಸುಳ್ಯದ ಪರಿವಾರಕಾನ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ಮಂಗಳವಾರ (ಸೆ.5 ) ನಡೆಯಿತು.
ಕಾರ್ಯಕ್ರಮವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಸುಳ್ಯ ತಾಲೂಕು ಶಿಕ್ಷಕರ ದಿನಾಚರಣೆಯ ಸಮಿತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಮಂಗಳೂರು ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಹಾಗೂ ಪದನಿಮಿತ್ತ ಸಹನಿರ್ದೇಶಕ ಡಾ.ಸಿಪ್ರಿಯನ್ ಮೊಂತೆರೋ, ಸುಳ್ಯ ತಹಶೀಲ್ದಾರ್ ಎಂ. ಮಂಜುನಾಥ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯನ್ನು ಸುಳ್ಯದಲ್ಲಿ ಆಯೋಜಿಸಿದರೂ ಪ್ರಮುಖ ಗಣ್ಯರ, ಸಚಿವರು, ಅಧಿಕಾರಿಗಳ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಆಮಂತ್ರಣ ಪತ್ರಿಕೆಯಲ್ಲಿ ಹಲವಾರು ಅತಿಥಿಗಳ ಹೆಸರು ಹಾಕಲಾಗಿತ್ತಾದರೂ ಕೆಲವೇ ಮಂದಿ ಪಾಲ್ಗೊಂಡಿದ್ದರು.
ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ.ವಿಶ್ವನಾಥ ಬದಿಕಾನ ಪ್ರಧಾನ ಭಾಷಣ ಮಾಡಿದರು. ಡಿಡಿಪಿಐ ದಯಾನಂದ ರಾಮಚಂದ್ರ ನಾಯ್ಕ ಸ್ವಾಗತಿಸಿದರು. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಈ. ಗಣ್ಯರ ಶುಭಾಶಯ ಓದಿದರು. ಉದ್ಘಾಟನಾ ಕಾರ್ಯಕ್ರಮಕ್ಕೂ ಮೊದಲು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ 21ಮಂದಿ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.