ನ್ಯೂಸ್ ನಾಟೌಟ್: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರಕಾರ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.
ಮಸೂದೆಗೆ ‘ನಾರಿ ಶಕ್ತಿ ವಂದನಾ ಅಧಿನಿಯಮ’ ಎಂದು ಹೆಸರಿಡಲಾಗಿದೆ. ಹಲವು ಪಕ್ಷಗಳು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಗೆ ಒತ್ತಾಯಿಸುತ್ತಿರುವುದರಿಂದ, ಮಸೂದೆಯು ಸುಗಮವಾಗಿ ಅಂಗೀಕಾರಗೊಳ್ಳುವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ.
ಈ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಕೇಂದ್ರ ಸಚಿವ ಸಂಪುಟ ಸೋಮವಾರ ಮಸೂದೆಗೆ ಅನುಮೋದನೆ ನೀಡಿದೆ. ದೇಶದ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಹೆಚ್ಚು ಹೆಚ್ಚು ಮಹಿಳೆಯರು ಭಾಗಿಯಾಗಬೇಕೆಂದು ಸರ್ಕಾರ ಬಯಸುತ್ತದೆ” ಎಂದು ಹೇಳಿದರು.
ಹೊಸ ಸಂಸತ್ ಕಟ್ಟಡದಲ್ಲಿ ಮೊದಲ ಮಸೂದೆಯಾಗಿ ಮಂಡನೆಯಾಗಿರುವ ಮಹಿಳಾ ಮೀಸಲಾತಿ ಮಸೂದೆಯು, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ನೀತಿ ನಿರೂಪಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಲು ಅನುವು ಮಾಡಿಕೊಡುತ್ತದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯನ್ನು ಸಾಧಿಸಲು ಸಹಾಯ ಮಾಡುತ್ತದೆ ಎಂದು ಸರ್ಕಾರ ಹೇಳಿದೆ.
ದೇಶದಲ್ಲಿ ಮಹಿಳೆಯರ ನೇತೃತ್ವದ ಅಭಿವೃದ್ಧಿ ಪ್ರಕ್ರಿಯೆಯನ್ನು ಜಗತ್ತು ಗುರುತಿಸಿದೆ. ಕ್ರೀಡೆಯಿಂದ ಸ್ಟಾರ್ಟ್ಅಪ್ಗಳವರೆಗೆ ವಿವಿಧ ವಲಯಗಳಲ್ಲಿ ಭಾರತೀಯ ಮಹಿಳೆಯರು ನೀಡಿದ ಕೊಡುಗೆಯನ್ನು ನೋಡುತ್ತಿದೆ ಎಂದು ಪ್ರಧಾನಿ ಹೇಳಿದರು.