ನ್ಯೂಸ್ ನಾಟೌಟ್: ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಆ್ಯಪ್ ಉಪಯೋಗಿಸಿಕೊಂಡು ವಿಶ್ವಕಪ್ ಕ್ರಿಕೆಟ್ ಪಂದ್ಯಾಟಗಳ ಸೋಲು ಗೆಲುವಿನಲ್ಲಿ ಲೆಕ್ಕಾಚಾರದಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿಕೊಂಡು ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿದ್ದ ಇಬ್ಬರನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಹಳೆಯಂಗಡಿಯ ಚೇಳ್ಯಾರು ಗ್ರಾಮದ ದೀಪಕ್(33) ಮತ್ತು ಕಾವೂರು ಮರಕಡದ ಸಂದೀಪ್ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಮಂಗಳೂರು ಹೊರ ವಲಯದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ನಿರತರಾಗಿದ್ದ ವೇಳೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ ಬೆಟ್ಟಿಂಗ್ ದಂಧೆಗೆ ಸಾರ್ವಜನಿಕರಿಂದ ಸಂಗ್ರಹಿಸಿದ ಒಟ್ಟು ರೂ. 31,000/- ಹಾಗೂ 4 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಅಂದಾಜು ಮೌಲ್ಯ ರೂ. 1,11,000/- ಎಂದು ತಿಳಿದು ಬಂದಿದೆ. ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಬೆಟ್ಟಿಂಗ್ ದಂಧೆಯಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಸಿಸಿಬಿ ಕಾರ್ಯಾಚರಣೆಯನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ನಡೆಸಿದ್ದಾರೆ.