ನ್ಯೂಸ್ ನಾಟೌಟ್: ಶ್ರೀಮಂಜುನಾಥನ ಸನ್ನಿಧಿ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಡಿಸೆಂಬರ್ 8 ರಿಂದ ಡಿಸೆಂಬರ್ 12ರ ತನಕ ನಡೆಯಲಿದೆ.
ಡಿ. 11 ರಂದು ಸೋಮವಾರ ಸಂಜೆ 5 ಗಂಟೆಗೆ ಸರ್ವಧರ್ಮ ಸಮ್ಮೇಳನದ 91ನೆ ಅಧಿವೇಶನವನ್ನು ಖ್ಯಾತ ವಿದ್ವಾಂಸ ಬೆಂಗಳೂರಿನ ಡಾ. ಗುರುರಾಜ ಕರ್ಜಗಿ ಉದ್ಘಾಟಿಸಲಿದ್ದಾರೆ. ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ.
ಸರ್ವೋಚ್ಛ ನ್ಯಾಯಾಲಯದ ವಕೀಲರಾದ ಡಾ. ಎಂ. ಆರ್. ವೆಂಕಟೇಶ್, ಬೆಂಗಳೂರಿನ ವಿಭು ಅಕಾಡೆಮಿ ಮುಖ್ಯಸ್ಥ ವಿಜಯಪುರದ ಮಹಮ್ಮದ್ ಗೌಸ್ ಹವಾಲ್ದಾರ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ರಾತ್ರಿ ಗಂಟೆ 8.30 ರಿಂದ ಬೆಂಗಳೂರಿನ ಅನುರಾಧಾ ವಿಕ್ರಾಂತ್ ಮತ್ತು ಬಳಗದವರಿಂದ ನೃತ್ಯ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ.
ಡಿ. 12 ರಂದು ಮಂಗಳವಾರ ಸಂಜೆ 5 ಗಂಟೆಗೆ ಸಾಹಿತ್ಯ ಸಮ್ಮೇಳನದ 91ನೆ ಅಧಿವೇಶನವನ್ನು ಬೆಂಗಳೂರಿನ ಇಸ್ರೋದ ಅಧ್ಯಕ್ಷ ಡಾ. ಎಸ್. ಸೋಮನಾಥ್ ಉದ್ಘಾಟಿಸಲಿದ್ದಾರೆ.
ಬೆಂಗಳೂರಿನ ಖ್ಯಾತ ಗಮಕಿ ಡಾ.ಎ.ವಿ. ಪ್ರಸನ್ನ ಅಧ್ಯಕ್ಷತೆ ವಹಿಸಲಿದ್ದಾರೆ.
ಹೊನ್ನಾವರದ ನಿವೃತ್ತ ಉಪನ್ಯಾಸಕ ಡಾ. ಶ್ರೀಪಾದ ಶೆಟ್ಟಿ, ಬೆಂಗಳೂರಿನ ರಂಗಕರ್ಮಿ ಪ್ರಕಾಶ್ ಬೆಳವಾಡಿ ಮತ್ತು ಬಂಟ್ವಾಳದ ಡಾ. ಅಜಕ್ಕಳ ಗಿರೀಶ್ ಭಟ್ ಉಪನ್ಯಾಸ ನೀಡಲಿದ್ದಾರೆ.
ರಾತ್ರಿ ಗಂಟೆ 8.30 ರಿಂದ ಬೆಂಗಳೂರಿನ ಜತಿನ್ ನೃತ್ಯ ಅಕಾಡೆಮಿಯ ವಿದುಷಿ ಅರ್ಚನಾ ಪುಣ್ಯೇಶ್ ಮತ್ತು ಬಳಗದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಲಿದೆ.
ಡಿ. 8 ರಂದು ಶುಕ್ರವಾರ ಬೆಳಿಗ್ಗೆ ಗಂಟೆ 10.30ಕ್ಕೆ ಹೈಸ್ಕೂಲು ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಗಿರೀಶ್ನಂದನ್ ಉದ್ಘಾಟಿಸಲಿದ್ದಾರೆ.