ನ್ಯೂಸ್ ನಾಟೌಟ್: ಅನಾಮದೇಯ ಇ-ಮೇಲ್ ನಿಂದ ಬೆಂಗಳೂರಿನ ಶಾಲೆಗಳು ಆಗಾಗ ಬಾಂಬ್ ಬೆದರಿಕೆಗಳನ್ನು ಎದುರಿಸುತ್ತಿದ್ದು, ಈ ಹಿಂದೆಯೂ ಕೆಲವು ಬಾರಿ ಇಂತಹ ಘಟನೆಗಳು ನಡೆದಿದ್ದವು.
ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಇತ್ತ ಬೆದರಿಕೆ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ಶಾಲೆಯ ಬಳಿ ಓಡಿ ಬಂದಿರುವ ಘಟನೆ ಇಂದು (ಡಿ.1) ಬೆಂಗಳೂರಿನಲ್ಲಿ ನಡೆದಿದೆ.
ಕಳೆದ ವರ್ಷವೂ ಬೆಂಗಳೂರು ನಗರದ ನಾಲ್ಕು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. ಅಂದು ಕೂಡ ಇ-ಮೇಲ್ ಮಾಡಿದವರು, ನಿಮ್ಮ ಶಾಲೆಯಲ್ಲಿ ಬಾಂಬ್ ಇರಿಸಲಾಗಿದ್ದು. ಎಚ್ಚರಿಕೆ ವಹಿಸುವುದು ನಿಮ್ಮ ಕರ್ತವ್ಯ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ಹೇಳಲಾಗಿತ್ತು.
ಮಹದೇವಪುರದ ಗೋಪಾಲನ್ ಇಂಟನ್ರ್ಯಾಷನಲ್ ಶಾಲೆ, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್, ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ನಲ್ಲಿ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿಗಳು ಬೆದರಿಸಿದ್ದಾರೆ ಎನ್ನಲಾಗಿದೆ. ಕೂಡಲೇ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿ ದೌಡಾಯಿಸಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.