ನ್ಯೂಸ್ ನಾಟೌಟ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು(ಜ.19) ಶುಕ್ರವಾರ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಇಂದು ಬೆಳಗ್ಗೆ 7 ಗಂಟೆಗೆ ದೆಹಲಿಯಿಂದ ಹೊರಟು ಬೆಳಗ್ಗೆ 9:35ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎಂದು ವರದಿ ತಿಳಿಸಿದೆ.
ಕಲಬುರಗಿಯಿಂದ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳಲಿದ್ದಾರೆ. ಅಲ್ಲಿ ಎರಡು ಗಂಟೆ ಕಾಲ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಧ್ಯಾಹ್ನ 1 ಗಂಟೆಗೆ ಮತ್ತೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 1:05 ಕ್ಕೆ ವಿಶೇಷ ವಿಮಾನದ ಮೂಲಕ ಕಲಬುರಗಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಮಧ್ಯಾಹ್ನ 2.10ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. 2.15ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣನಿಂದ ರಸ್ತೆ ಮಾರ್ಗವಾಗಿ ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ.
ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ವಿಮಾನ ನಿಲ್ದಾಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಇಂದು ಬೆಳಗ್ಗೆ 8 ರಿಂದ ಸಂಜೆ 6 ಗಂಟೆ ವರೆಗೆ ನಿರ್ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.
ರಾಮ ಮಂದಿರದ ಉದ್ಘಾಟನೆಯ ನಡುವೆ ಪ್ರಧಾನಿ ಮೋದಿ ಅತಿದೊಡ್ಡ ಬೋಯಿಂಗ್ ಸೌಲಭ್ಯವನ್ನು ಉದ್ಘಾಟಿಸಲಿದ್ದು, ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ (BIETC) ಕ್ಯಾಂಪಸ್ ನ್ನು ಬೆಂಗಳೂರು ವಿಮಾನ ನಿಲ್ದಾಣದ ಸಮೀಪವಿರುವ ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್ನಲ್ಲಿ ನಿರ್ಮಿಸಲಾಗಿದೆ.
ಇಂದು ಮಧ್ಯಾಹ್ನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಮೋದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಲಿದ್ದಾರೆ. ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮೋದಿ ಜೊತೆ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ ಎಂದು ವರದಿ ತಿಳಿಸಿದೆ.