ನ್ಯೂಸ್ ನಾಟೌಟ್: ಕಳೆದ 10 ವರ್ಷಗಳಿಂದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಚುನಾವಣಾ ರಾಜಕೀಯಕ್ಕೆ ಗುಡ್ಬೈ ಹೇಳಿದ್ದಾರೆ ಎನ್ನಲಾಗಿದೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಸಂಸದರಾಗಿ ಆಯ್ಕೆ ಮಾಡಿದ ಮತದಾರರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಂಸದ ಡಿ.ವಿ. ಸದಾನಂದಗೌಡ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ, ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು . ಇಂತಿ ನಿಮ್ಮವನೇ ಆದ ಡಿ.ವಿ. ಸದಾನಂದ ಗೌಡ’ ಎಂದು ಹಂಚಿಕೊಂಡಿದ್ದಾರೆ.
ಇನ್ನು ಸಂಸದ ಸದಾನಂದಗೌಡ ಅವರಿಗೆ ಸ್ವತಃ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೇ ಕರೆ ಮಾಡಿ ನೀವು ಲೋಕಸಭಾ ಚುನಾವಣೆಯಿಂದ ದೂರವಿರಿ. ನಿಮಗೆ ಈ ಬಾರಿ ಟಿಕೆಟ್ ನೀಡುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ. ಇದರ ಬೆನ್ನಲ್ಲಿಯೇ ಸದಾನಂದಗೌಡ ಅವರು ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರಿಗೆ ಚುನಾವಣಾ ಪೂರ್ವ ತಯಾರಿಗೆ ಮಾಡಿಕೊಳ್ಳುತ್ತಿದ್ದ ಸಿದ್ಧತೆಯನ್ನು ನಿಲ್ಲಿಸಲು ತಿಳಿಸಿದ್ದಾರೆ. ಜೊತೆಗೆ, ಈವರೆಗೆ ತಮಗೆ ಬೆಂಬಲ ನೀಡಿದ ರೀತಿಯಲ್ಲಿಯೇ ಪಕ್ಷದಿಂದ ಟಿಕೆಟ್ ಕೊಡುವ ಅಭ್ಯರ್ಥಿಗೂ ಬೆಂಬಲಿಸಬೇಕು ಎಂಬ ಮಾಹಿತಿ ರವಾನಿಸಿದ್ದಾರೆ ಎನ್ನಲಾಗಿದೆ.