ನ್ಯೂಸ್ ನಾಟೌಟ್: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್ಡ್ರೈವ್ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್ ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ. ಉಭಯ ನಾಯಕರು ಸೆಷನ್ಸ್ ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ತಡೆಯಾಜ್ಞೆಯನ್ನು ತಂದಿದ್ದಾರೆ.
ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್.ಡಿ. ಕುಮಾರಸ್ವಾಮಿ ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು. ಎಸ್ ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದು, ಸ್ವ-ಇಚ್ಛಾ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಸ್ವ-ಇಚ್ಛಾ ಹೇಳಿಕೆಗೆ ಸಹಿ ಹಾಕಲು ಎಚ್.ಡಿ. ರೇವಣ್ಣ ನಿರಾಕರಿಸಿದ್ದಾರೆ. ನಿಮಗೆ ಬೇಕಾದಂತೆ ಬರೆದುಕೊಂಡಿದ್ದೀರಾ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.
ಎಚ್.ಡಿ. ರೇವಣ್ಣ ಅವರನ್ನು ಐದು ದಿನಗಳ ಕಸ್ಟಡಿಗೆ ನೀಡಿ ಭಾನುವಾರ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಅಪಹರಣ ಕೇಸ್ನಲ್ಲಿ ರೇವಣ್ಣ ಅವರಿಂದ ಸ್ವ-ಇಚ್ಛಾ ಹೇಳಿಕೆ ದಾಖಲು ಮಾಡಿಕೊಳ್ಳಲು ಮುಂದಾಗಲಾಗಿದೆ. ಈ ಸಂಬಂಧ ರೇವಣ್ಣ ಅವರಿಗೆ ಭಾನುವಾರವೇ ಒಂದಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಪ್ರಯತ್ನವನ್ನು ಅಧಿಕಾರಿಗಳೂ ಮಾಡಿದ್ದರು.