ನ್ಯೂಸ್ ನಾಟೌಟ್ : ಕಳ್ಳಭಟ್ಟಿ ಸಾರಾಯಿ ಸೇವಿಸಿ ಅನಾಹುತ ಸಂಭವಿಸಿದ್ದು, ಮೃತರ ಸಂಖ್ಯೆ 25ಕ್ಕೆ ಏರಿಕೆಯಾದ ಘಟನೆ ತಮಿಳುನಾಡಿನ (Tamil Nadu) ಕಳ್ಳಕುರಿಚಿ ಜಿಲ್ಲೆಯಲ್ಲಿ ನಡೆದಿದೆ.
ಈ ಘಟನೆಯಲ್ಲಿ 60ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಕೆಲವರನ್ನು ಜಿಲ್ಲಾಸ್ಪತ್ರೆಗೆ ಮತ್ತು ಗಂಭೀರ ಆರೋಗ್ಯ ಸ್ಥಿತಿಯಲ್ಲಿರುವವರನ್ನು ಪುದುಚೆರಿಗೆ ಸಾಗಿಸಲಾಗಿದೆ. ಕರುಣಾಪುರಂ ಕಾಲೋನಿಯವರು ಸೇರಿ ನೂರಾರು ಜನ ಮಂಗಳವಾರ (ಜೂನ್ 18) ರಾತ್ರಿ ಕಳ್ಳಬಟ್ಟಿ ಸೇವಿಸಿದ್ದಾರೆ. ಬುಧವಾರ ಬೆಳಗ್ಗೆ ವಾಂತಿ, ಭೇದಿ ಉಂಟಾಗಿದೆ. ಕೂಡಲೇ ಅವರನ್ನು ಕಳ್ಳಕುರಿಚಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಆದರೂ 25 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ತಪ್ಪಿತಸ್ಥರು ಮತ್ತು ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, “ಕಳ್ಳಕುರಿಚಿ ಜಿಲ್ಲೆಯಲ್ಲಿ ಕಲಬೆರಕೆ ಮದ್ಯ ಸೇವಿಸಿದ ಹಲವರು ಮೃತಪಟ್ಟಿರುವ ಸುದ್ದಿ ಕೇಳಿ ಆಘಾತವಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಬಂಧಿಸಲಾಗಿದೆ. ಇದನ್ನು ತಡೆಗಟ್ಟಲು ವಿಫಲವಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಇಂತಹ ಅಪರಾಧಗಳಲ್ಲಿ ಭಾಗಿಯಾಗಿರುವವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಸಮಾಜವನ್ನು ಹಾಳು ಮಾಡುವ ಇಂತಹ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲಾಗುವುದುʼʼ ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ 49 ವರ್ಷದ ಕನ್ನುಕುಟ್ಟಿ ಎನ್ನುವ ವ್ಯಕ್ತಿಯನ್ನು ಈಗಾಗಲೇ ಬಂಧಿಸಲಾಗಿದ್ದು ಆತನಿಂದ ಸುಮಾರು 200 ಲೀಟರ್ ಕಳ್ಳಬಟ್ಟಿ ವಶಪಡಿಸಿಕೊಳ್ಳಲಾಗಿದೆ.
Click 👇