ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಸೇರಿದಂತೆ ಇತರ ನಾಲ್ವರು ಆರೋಪಿಗಳನ್ನು (ಪ್ರದೂಶ್, ವಿನಯ್, ಧನರಾಜ್ ) ಇಂದು (ಜೂ.22) ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ಸಂದರ್ಭ ಕೋರ್ಟ್ ಆವರಣದಲ್ಲಿ ದರ್ಶನ್ ಅಭಿಮಾನಿಗಳು ಹೆಚ್ಚಾಗಿ ಸೇರುವ ಸಾಧ್ಯತೆ ಹಿನ್ನೆಲೆಯಲ್ಲಿ ಕೆಎಸ್ಆರ್ ಪಿ ಪೊಲೀಸ್ ಸಹಿತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇಂದು ನ್ಯಾಯಾಲಯ ನಟ ದರ್ಶನ್ರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ರೆ ಪರಪ್ಪನ ಅಗ್ರಹಾರ ಜೈಲಿನ ಬಳಿಯೂ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ಸಾಧ್ಯತೆಯಿದೆ. ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನ ಬಳಿಯೂ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿದೆ. ಕಳೆದ ವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ ಅಭಿಮಾನಿಗಳು ದಾಂಧಲೆ ನಡೆಸಿ ಓರ್ವ ಮಾಧ್ಯಮ ಪ್ರತಿನಿಧಿಯ ಮೇಲೆ ನ್ಯಾಯಾಲಯ ಆವರಣದಲ್ಲೇ ಹಲ್ಲೆ ನಡೆಸಿದ್ದರು.
ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆ ಅವರನ್ನು ಶನಿವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈಗಾಗಲೇ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಗೆಳತಿ ಪವಿತ್ರಾಗೌಡ ಸೇರಿದಂತೆ 13 ಆರೋಪಿಗಳು ಪರಪ್ಪನ ಅಗ್ರಹಾರ ಸೇರಿದ್ದಾರೆ. ಹೀಗಾಗಿ ಬಾಕಿ ಉಳಿದಿರುವ ದರ್ಶನ್ ಸೇರಿ ನಾಲ್ವರು ಆರೋಪಿಗಳು ಜೈಲು ಸೇರುವ ಸಾಧ್ಯತೆಯಿರುವುದರಿಂದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ನ್ಯಾಯಾಲಯ, ಪರಪ್ಪನ ಅಗ್ರಹಾರ ಜೈಲಿನ ಸುತ್ತ ಸೇರುವ ಸಾಧ್ಯತೆಯಿದೆ.
ಪ್ರಿಯತಮೆ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದನೆಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದು ಚಿತ್ರಹಿಂಸೆ ನೀಡಿ ಬರ್ಬರವಾಗಿ ಕೊಂದು ಮೋರಿಗೆ ಎಸೆದಿದ್ದ ಡಿಗ್ಯಾಂಗ್. ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 16 ಮಂದಿಯನ್ನು ಬಂಧಿಸಲಾಗಿತ್ತು. ಇಂದು ದರ್ಶನ್ನ ಮುಂದಿನ ಭವಿಷ್ಯ ತಿಳಿಯಲಿದೆ.