ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಕಾರಣ ದಕ್ಷಿಣಕನ್ನಡ ಜಿಲ್ಲೆಯ ಹಲವು ಪ್ರಾಥಮಿಕ, ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ಗುರುವಾರ(ಜುಲೈ.18) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಸುಳ್ಯ, ಪುತ್ತೂರು, ಬೆಳ್ತಂಗಡಿ, ಕಡಬ, ಬಂಟ್ವಾಳ ತಾಲೂಕಿಗೆ ರಜೆ ನೀಡಲಾಗಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಿನಾಂಕ 18-07-2024 ರಂದು ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.
ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ನೋಡಿಕೊಳ್ಳುವುದು ಮೊದಲಾದ ಸೂಚನೆ ಮತ್ತು ಎಚ್ಚರಿಕೆಗಳನ್ನು ಜಿಲ್ಲಾಡಳಿತ ನೀಡಿದೆ.