ನ್ಯೂಸ್ ನಾಟೌಟ್: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಮನೆ ಕಳೆದುಕೊಂಡವರ ನೆರವಿಗೆ ಕರ್ನಾಟಕ ಸರ್ಕಾರ ಮುಂದಾಗಿದೆ. ಇಲ್ಲಿನ ಸಂತ್ರಸ್ತರಿಗೆ 100 ಮನೆಗಳನ್ನು ಕರ್ನಾಟಕ ಸರ್ಕಾರ ನಿರ್ಮಾಣ ಮಾಡಿಕೊಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಭರವಸೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ವಿವರಿಸಿದ ಸಿದ್ದರಾಮಯ್ಯ, ‘ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ” ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ವಯನಾಡಿಗೆ ದೇಶದ ವಿವಿಧ ಭಾಗಗಳಿಂದ ನೆರವಿನಹಸ್ತ ಸಿಗುತ್ತಿದೆ. ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ಘೋಷಣೆ ಮಾಡಿದ್ದರು. ಭೂಕುಸಿತದಿಂದ ಸಂಕಷ್ಟದಲ್ಲಿರುವ ಕನ್ನಡಿಗರ ನೆರವಿಗೆ ಧಾವಿಸಲು ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗಿತ್ತು. ಗಡಿ ಜಿಲ್ಲೆ ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿತ್ತು. ಎಚ್.ಡಿ ಕೋಟೆಯಲ್ಲಿ ಗಾಯಾಳುಗಳನ್ನು ಕರೆತಂದು ಅಗತ್ಯ ಚಿಕಿತ್ಸೆ ಕೊಡಿಸಲು ಬಸ್ಗಳನ್ನು ಏರ್ಪಡಿಸಲಾಗಿತ್ತು.