ನ್ಯೂಸ್ ನಾಟೌಟ್: ಪ್ರವಾಸಿ ಬಾಂಗ್ಲಾದೇಶ ತಂಡದ ವಿರುದ್ಧ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಆಲ್ ರೌಂಡರ್ ಆರ್. ಅಶ್ವಿನ್ ಹಾಗೂ ವಿಕೆಟ್ ಕೀಪರ್ ಕಮ್ ಬ್ಯಾಟ್ಸ್ ಮನ್ ರಿಷಭ್ ಪಂತ್ ಕ್ರಮವಾಗಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಪ್ರಥಮ ಇನಿಂಗ್ಸ್ನಲ್ಲಿ ಭರ್ಜರಿ ಶತಕ ಸಿಡಿಸಿ ರವಿಚಂದ್ರನ್ ಅಶ್ವಿನ್ (R Ashwin) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಶ್ವಿನ್ 133 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 11 ಬೌಂಡರಿಗಳೊಂದಿಗೆ 113 ರನ್ ಬಾರಿಸಿದ್ದರು. ಈ ಸೆಂಚುರಿಯೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ 2 ಶತಕ ಹಾಗೂ ಮೂರಕ್ಕಿಂತ ಹೆಚ್ಚು ಬಾರಿ 5 ವಿಕೆಟ್ ಪಡೆದ ಏಕೈಕ ಆಟಗಾರ ಎಂಬ ವಿಶ್ವ ದಾಖಲೆಯನ್ನು ರವಿಚಂದ್ರನ್ ಅಶ್ವಿನ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಇಂತಹದೊಂದು ಅಪರೂಪದ ದಾಖಲೆ ಇಂಗ್ಲೆಂಡ್ನ ಮಾಜಿ ನಾಯಕ ಇಯಾನ್ ಬಾಥಮ್ ಹೆಸರಿನಲ್ಲಿತ್ತು. ಇದೇ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಂತ್ 123 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಟೀಮ್ ಇಂಡಿಯಾ ಪರ ಟೆಸ್ಟ್ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ವಿಕೆಟ್ ಕೀಪರ್ಗಳ ಪಟ್ಟಿಯಲ್ಲಿ ರಿಷಭ್ ಪಂತ್ ಅಗ್ರಸ್ಥಾನಕ್ಕೇರಿದ್ದಾರೆ.
ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ಪರ 144 ಟೆಸ್ಟ್ ಇನಿಂಗ್ಸ್ ಆಡಿರುವ ಧೋನಿ ಕೇವಲ 6 ಶತಕಗಳನ್ನು ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ರಿಷಭ್ ಪಂತ್ ಅಗ್ರಸ್ಥಾನಕ್ಕೇರಿದ್ದಾರೆ.