- +91 73497 60202
- [email protected]
- November 22, 2024 5:31 AM
ಶಾಸಕ ಸತೀಶ್ ಸೈಲ್ ಸೇರಿ ಏಳು ಮಂದಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ..! 40ಕೋಟಿ ರೂ. ಗೂ ಅಧಿಕ ದಂಡ ಕಟ್ಟುವಂತೆ ಆದೇಶ..!
ನ್ಯೂಸ್ ನಾಟೌಟ್: ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದ (2009-10) ಆರೋಪಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಶನಿವಾರ(ಅ.26) ಆದೇಶಿಸಿದೆ. ಒಟ್ಟು 6 ಪ್ರಕರಣಗಳಲ್ಲಿ ಶಾಸಕ ಸತೀಶ್ ಸೈಲ್ ಹಾಗೂ ಅಂದಿನ ಬಂದರು ಅಧಿಕಾರಿಯಾಗಿದ್ದ ಮಹೇಶ್ ಬಿಳಿಯೆ ಎಂಬವರು ಸೇರಿದಂತೆ 7 ಜನರನ್ನು ದೋಷಿಗಳು ಎಂದು ಕೋರ್ಟ್ ತಿಳಿಸಿದೆ. ಅಕ್ರಮ ಗಣಿಗಾರಿಕೆ ತನಿಖೆ ವೇಳೆ ಈ ಪ್ರಕರಣವನ್ನು ಬೆಳಕಿಗೆ ತಂದಿದ್ದ ಅಂದಿನ ಲೋಕಾಯುಕ್ತ ಸಂತೋಷ್ ಹೆಗ್ಡೆ ಸಮಗ್ರ ತನಿಖೆ ನಡೆಸಿ, ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಅಪರಾಧಿಗಳಿಗೆ ವಂಚನೆ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಸತೀಶ್ ಸೈಲ್ ಜೊತೆಗೆ ಮಹೇಶ್ ಬಿಳಿಯೆ, ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್, ಖಾರದಪುಡಿ ಮಹೇಶ್, ಶಿಪ್ಪಿಂಗ್ ಕಂಪನಿಯ ಮಲ್ಲಿಕಾರ್ಜುನ ಎಂಬವರಿಗೂ ಜೈಲು ಶಿಕ್ಷೆ ವಿಧಿಸಲಾಗಿದೆ. ಇದೇ ವೇಳೆ ಎಲ್ಲಾ ಅಪರಾಧಿಗಳ ವಿರುದ್ಧದ 6 ಪ್ರಕರಣಗಳ ಸಂಬಂಧ ಒಟ್ಟಾರೆ 40 ಕೋಟಿ ರೂ.ಗೂ ಅಧಿಕ ದಂಡವನ್ನು ನ್ಯಾಯಾಲಯ ವಿಧಿಸಿದೆ. ದಂಡದ ಹಣವನ್ನು ಜಪ್ತಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಆದೇಶಿಸಿದೆ. ಅಕ್ರಮ ಗಣಿಗಾರಿಕೆ ಮೂಲಕ ವಿದೇಶಕ್ಕೆ ಸಾಗಿಸಲು ಕಾರವಾರದ ಬೇಲೆಕೇರಿ ಬಂದರಿಯಲ್ಲಿ 11,312 ಮೆಟ್ರಿಕ್ ಟನ್ ಅದಿರನ್ನು ಸಂಗ್ರಹಿಸಲಾಗಿತ್ತು. ಇದನ್ನು ಅಧಿಕಾರಿಗಳು ಜಪ್ತಿ ಮಾಡಿದ್ದರು. ಅನುಮತಿ ಇಲ್ಲದೇ ಮಲ್ಲಿಕಾರ್ಜುನ ಶಿಪ್ಪಿಂಗ್ ಕಾರ್ಪೊರೇಷನ್ ಮಾಲೀಕರಾಗಿದ್ದ ಸತೀಶ್ ಸೈಲ್ ಇದನ್ನು ವಿದೇಶಕ್ಕೆ ಸಾಗಣೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ 6 ಪ್ರಕರಣಗಳು ದಾಖಲಾಗಿದ್ದವು, ಈ ಬಗ್ಗೆ ಈಗ ಶಿಕ್ಷೆ ಪ್ರಕಟಗೊಂಡಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ