ನ್ಯೂಸ್ ನಾಟೌಟ್ : ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಕ್ಸಲ್ ಚಟುವಟಿಕೆ ಹೆಚ್ಚಾಗಿರುವ ಬಗ್ಗೆ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಆ್ಯಂಟಿ ನಕ್ಸಲ್ ಫೋರ್ಸ್ ಮತ್ತು ಪೊಲೀಸರು ತಪಾಸಣೆಗೆ ಇಳಿದಿದ್ದರು. ಈ ವೇಳೆ ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬವರ ಮನೆಯೊಂದರಲ್ಲಿ 3 ಬಂದೂಕು ಪತ್ತೆಯಾಗಿವೆ. ಈ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಸುಳಿವು ಸಿಕ್ಕಿದೆ ಎನ್ನಲಾಗಿದೆ.
ಬಂದೂಕು ಸಿಕ್ಕಿರುವ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್, ಸಿಐಟಿ ಎಡಿಜಿಪಿ ಪ್ರಣಬ್ ಮೊಹಂತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಒತ್ತುವರಿ, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೆ ಇಬ್ಬರನ್ನು ವಶಕ್ಕೆ ಪಡೆದು ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ನಕ್ಸಲ್ ಪೀಡಿತ ಪ್ರದೇಶದಲ್ಲಿ ತೀವ್ರ ಕೂಂಬಿಂಗ್ ಕಾರ್ಯಚರಣೆ ನಡೆಯುತ್ತಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಈದು ಗ್ರಾಮದಲ್ಲಿ ನಕ್ಸಲರ ಓಡಾಟದ ಶಂಕೆ ವ್ಯಕ್ತವಾಗಿತ್ತು. ಹಾಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Click