ನ್ಯೂಸ್ ನಾಟೌಟ್: ಕರ್ನಾಟಕದ ವಿಧಾನಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಚನ್ನಪಟ್ಟಣದಲ್ಲಿ ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ 1,12,635 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ 87,120 ಮತಗಳನ್ನು ಪಡೆದು 25515 ಮತಗಳ ಅಂತರದಲ್ಲಿ ಸೋಲನುಭವಿಸಿದ್ದಾರೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಯೋಗೇಶ್ವರ್ ಗೆಲುವು ದಾಖಲಿಸುವುದು ಖಚಿತವಾಗುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ. ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್ ಅವರನ್ನು ಮತದಾರರು ‘ಕೈ’ ಹಿಡಿದಿದ್ದಾರೆ. ಅತ್ತ ನಿಖಿಲ್ಗೆ ಮೂರನೇ ಬಾರಿಯೂ ಮುಖಭಂಗವಾಗಿದೆ. ಈ ಹಿಂದೆ ಮಂಡ್ಯದಿಂದ ಲೋಕಸಭೆ ಚುನಾವಣೆ, ರಾಮನಗರದಿಂದ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಸೋಲುಂಡಿದ್ದ ಅವರು, ಇದೀಗ ಮೂರನೇ ಪ್ರಯತ್ನದಲ್ಲಿಯೂ ವಿಫಲರಾಗಿದ್ದಾರೆ.
ಬಳ್ಳಾರಿ ಗಣಿಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ. ಅನ್ನಪೂರ್ಣ ತುಕರಾಂ 93051 ಮತಗಳನ್ನು ಪಡೆದು ಬಿಜೆಪಿಯ ಬಂಗಾರು ಹನುಮಂತು (83483) ಅವರನ್ನು 9568 ಮತಗಳ ಅಂತರದಿಂದ ಸೋಲಿಸಿದ್ದಾರೆ. 2023ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಇ ತುಕಾರಾಂ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ, 2024ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಇ ತುಕಾರಾಂ ಅವರು ಲೋಕಸಭೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದರು. ಬಳಿಕ, ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
ಶಿಗ್ಗಾಂವಿಯಲ್ಲಿ ಕಾಂಗ್ರೆಸ್ನ ಯಾಸಿರ್ ಪಠಾಣ್ 1,00,587 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಭರತ್ ಬೊಮ್ಮಾಯಿ 86,960 ಮತಗಳನ್ನು ಪಡೆದಿದ್ದು, 13448 ಅಂತರದಲ್ಲಿ ಸೋಲಾಗಿದೆ.