ಉಪ್ಪಿನಂಗಡಿ: ಸರ್ಕಾರಿ ಜಮೀನಿನಲ್ಲಿ ಕಟ್ಟಿದ್ದ ಮನೆಯನ್ನು ಕೆಡವಿದ ಕಂದಾಯ ಅಧಿಕಾರಿಗಳು..! ಚಿತ್ರದುರ್ಗದಿಂದ ಬಂದು ನೆಲೆಸಿದ್ದ ವೃದ್ಧ ದಂಪತಿ

ನ್ಯೂಸ್ ನಾಟೌಟ್: ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿದ ಕಾರಣಕ್ಕೆ ವೃದ್ಧ ದಂಪತಿ ಆರು ವರ್ಷಗಳಿಂದ ವಾಸವಿದ್ದ ಮನೆಯನ್ನು ತಾಲೂಕು ಕಂದಾಯ ಅಧಿಕಾರಿಗಳು ನೆಲಸಮಗೊಳಿಸಿದ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಎಂಬಲ್ಲಿ ಇಂದು(ನ.13) ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿ ವಾಸವಿದ್ದ ಮನೆಯನ್ನು ಧ್ವಂಸಗೊಳಿಸಲಾಗಿದೆ.ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿ ನಿವಾಸಿಗಳಾಗಿದ್ದ ಈ ದಂಪತಿ ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿದ್ದರು. ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಕಳೆದ 6 ವರ್ಷಗಳಿಂದ ವಾಸಿಸುತ್ತಿದ್ದರು. ದಂಪತಿಗೆ ಯಾವುದೇ ಪಿತ್ರಾರ್ಜಿತ ಆಸ್ತಿ ಇರಲಿಲ್ಲ. ಹೀಗಾಗಿ ಕಾಪಿನಬಾಗಿಲು ಎಂಬಲ್ಲಿನ ಸರ್ಕಾರಿ ಜಾಗದಲ್ಲಿ ಸಣ್ಣ ಮನೆ ಕಟ್ಟಿಕೊಂಡಿದ್ದರು. ದಂಪತಿ ನಿತ್ಯ ಕೂಲಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ಈ ದಂಪತಿ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿರುವ ಬಗ್ಗೆ ಬೆಳ್ತಂಗಡಿ ತಾಲೂಕಿನ ಅಶೋಕ್ ಆಚಾರ್ಯ ಎಂಬವರು ಹೈಕೋರ್ಟ್ ನಲ್ಲಿ ದಾವೆ ಹೂಡಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರಿ ಜಾಗ ತೆರವುಗೊಳಿಸಲು ಹೈಕೋರ್ಟ್ ಸೂಚನೆ ನೀಡಿದ್ದರಿಂದ ಕಳೆದ ಫೆಬ್ರವರಿಯಲ್ಲೇ ಮನೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಆದರೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆ ಕೆಡವದೆ ವಾಪಸ್ಸಾಗಿದ್ದರು. ಇಂದು ದಿಢೀರ್ ಆಗಮಿಸಿದ ಅಧಿಕಾರಿಗಳು ಜೆಸಿಬಿ ಯಂತ್ರದ ಮೂಲಕ ಮನೆಯ ಸಾಮಗ್ರಿಗಳನ್ನೆಲ್ಲ ಹೊರಗಿಟ್ಟು ಮನೆಯನ್ನು ಕೆಡವಿ ಹಾಕಿದ್ದಾರೆ. Click