ನ್ಯೂಸ್ ನಾಟೌಟ್ :ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಗುರುವಾರ ರಾತ್ರಿ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ(ಡಿ.28) ನಡೆಯಲಿದೆ ಎಂದು ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಅವರು, ಅಧಿಕೃತ ಇತರ ಮಾಹಿತಿಯನ್ನು ಇಂದು (ಶುಕ್ರವಾರ) ತಿಳಿಸಲಾಗುವುದು ಎಂದಿದ್ದಾರೆ.
ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಡಿಸೆಂಬರ್ 28 ರಂದು ನಡೆಯಲಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನ ಸೇರಿದಂತೆ ಏಳು ದಿನಗಳ ಕಾಲ ಕಾಂಗ್ರೆಸ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಸಿಂಗ್ ಅವರ ಪಾರ್ಥಿವ ಶರೀರ ಏಮ್ಸ್ ನಿಂದ ಗುರುವಾರ ತಡರಾತ್ರಿ ಅವರ ನಿವಾಸಕ್ಕೆ ತಲುಪಿದೆ. ಇಂದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಈಗಾಗಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಡಾ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ.