ನ್ಯೂಸ್ ನಾಟೌಟ್ : ಮಸೀದಿಯೊಳಗೆ ಜೈ ಶ್ರೀರಾಮ್ ಘೋಷಣೆಯನ್ನು ಕೂಗುವುದು ಕ್ರಿಮಿನಲ್ ಅಪರಾಧ ಹೇಗೆ ಎಂದು ಸುಪ್ರೀಂ ಕೋರ್ಟ್ ಸೋಮವಾರ(ಡಿ.16) ಪ್ರಕರಣ ಒಂದರ ವಿಚಾರಣೆ ವೇಳೆ ಪ್ರಶ್ನಿಸಿದೆ.
ದಕ್ಷಿಣ ಕನ್ನಡದ ಕಡಬ ತಾಲೂಕಿನ ಮಸೀದಿ ಆವರಣಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಇಬ್ಬರು ವ್ಯಕ್ತಿಗಳ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ನಡೆಸಿತ್ತು.
ಅವರು ನಿರ್ದಿಷ್ಟ ಧಾರ್ಮಿಕ ನುಡಿಗಟ್ಟು ಅಥವಾ ಹೆಸರನ್ನು ಕೂಗುತ್ತಿದ್ದರು. ಅದು ಹೇಗೆ ಅಪರಾಧ?. ಮಸೀದಿ ಆವರಣಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಆರೋಪಿಗಳ ಗುರುತು ಪತ್ತೆ ಹಚ್ಚಿದ್ದು ಹೇಗೆ?. ಆರೋಪಿಗಳ ಗುರುತು ಖಾತ್ರಿಪಡಿಸಿಕೊಳ್ಳುವ ಮುನ್ನ ಸಿಸಿಟಿವಿ ಇಲ್ಲವೇ ಇನ್ನಾವುದೆ ಪುರಾವೆಗಳನ್ನು ಪರಿಶೀಲಿಸಲಾಗಿದೆಯೇ ಎಂದು ನ್ಯಾಯಪೀಠ ದೂರುದಾರರ ಪರ ವಕೀಲರನ್ನು ಪ್ರಶ್ನಿಸಿತು.
ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲ್ಲೂಕು ಐತ್ತೂರು ಗ್ರಾಮದ ಮರ್ಧಾಳದ ಬದ್ರಿಯಾ ಜುಮ್ಮಾ ಮಸೀದಿ ಆವರಣವನ್ನು ಸೆಪ್ಟೆಂಬರ್ 24ರಂದು ರಾತ್ರಿ 10.50ರಲ್ಲಿ ಅಕ್ರಮವಾಗಿ ಪ್ರವೇಶಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿತ್ತು. ಬ್ಯಾರಿಗಳನ್ನು ಬದುಕಲು ಬಿಡುವುದಿಲ್ಲ ಎಂದು ಬೊಬ್ಬೆ ಹಾಕಿದ್ದಾರೆ ಎಂದು ಆರೋಪಿಸಿ ಕೀರ್ತನ್ ಕುಮಾರ್ ಮತ್ತು ಎನ್.ಎಂ.ಸಚಿನ್ ಕುಮಾರ್ ವಿರುದ್ಧ ಮಸೀದಿ ಸಿಬ್ಬಂದಿ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ದೂರಿನನ್ವಯ ಆರೋಪಿಗಳಿಬ್ಬರ ವಿರುದ್ಧ ಐಪಿಸಿಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿಗಳು ತಮ್ಮ ವಿರುದ್ಧದ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ‘ಹಿಂದೂ, ಮುಸಲ್ಮಾನರು ಸೌಹಾರ್ದತೆಯಿಂದ ಜೀವಿಸುತ್ತಿದ್ದೇವೆ ಎಂದು ಸ್ವತಃ ದೂರುದಾರರೇ ಹೇಳಿದ್ದಾರೆ. ಆದರೆ, ಅರ್ಜಿದಾರರ ವಿರುದ್ಧ ಭಾರತೀಯ ದಂಡ ಸಂಹಿತೆ–1860ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ’
‘ಜೈ ಶ್ರೀರಾಮ್ ಎಂದು ಘೋಷಣೆ ಕೂಗುವುದು ಧಾರ್ಮಿಕ ಭಾವನೆಗೆ ಹೇಗೆ ಧಕ್ಕೆಯಾಗುತ್ತದೆ ಎಂಬುದು ಅರ್ಥವಿಲ್ಲ. ಈ ಪ್ರಕರಣದಲ್ಲಿ ಯಾವುದೇ ಅಪರಾಧ ಕಂಡು ಬರುತ್ತಿಲ್ಲ. ಹಾಗಾಗಿ, ಅರ್ಜಿದಾರರ ವಿರುದ್ಧ ವಿಚಾರಣೆಗೆ ಅನುಮತಿ ನೀಡುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ’ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಪೀಠ ಇಬ್ಬರು ವ್ಯಕ್ತಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿತ್ತು. ಈ ಬಗ್ಗೆ ಸುಪ್ರಿಂ ಕೋರ್ಟ್ ಕೂಡ ಹೈಕೋರ್ಟ್ ನೀಡಿದ ತೀರ್ಪನ್ನು ಎತ್ತಿಹಿಡಿದಿದೆ.
Click