ನ್ಯೂಸ್ ನಾಟೌಟ್: 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ತ್ರಿಶಾಲ್ (13) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ತ್ರಿಶಾಲ್ ಇಂದು (ಜನವರಿ 10) ಮನೆಯಲ್ಲಿ ಶಾಲಾ ಸಮವಸ್ತ್ರದಲ್ಲೇ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಇನ್ನು ಮೃತ ತ್ರಿಶಾಲ್, ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರನಾಗಿದ್ದು, ಆತ್ಮಹತ್ಯೆಗೂ ಮುನ್ನವೇ ಡೆತ್ ನೋಟ್ ಬರೆದಿಟ್ಟಿದ್ದಾನೆ ಎನ್ನಲಾಗಿದೆ.
ಮೃತ ತ್ರಿಶಾಲ್ ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ. ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿದೆ. ಅದೇ ವಿಚಾರಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮೃತದೇಹ ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ್ದಾರೆ.
ಬಿಜೆಪಿ ಕಾರ್ಯಕರ್ತೆಯಾಗಿರುವ ಶಕುಂತಲಾ ನಟರಾಜ್ ಕಾಂಗ್ರೆಸ್ ಹಾಗೂ ಎಡಪಂಥಿಯ ನಿಲುವುಗಳನ್ನು ವಿರೋಧಿಸುತ್ತಾ ಆಗಾಗ ಸುದ್ದಿಯಾಗುತ್ತಿರುತ್ತಾರೆ.