ಬಂಧನದ ವೇಳೆ ಪೊಲೀಸ್ ಸಿಬ್ಬಂದಿಗೆ ಚಾಕುವಿನಿಂದ ಇರಿದ ಆರೋಪಿ..! ಕೊಲೆ ಆರೋಪಿಯ ಎರಡೂ ಕಾಲಿಗೆ ಗುಂಡೇಟು..!

ನ್ಯೂಸ್ ನಾಟೌಟ್: ಇತ್ತೀಚೆಗೆ ನಡೆದ ರೌಡಿಶೀಟರ್ ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸುವ ವೇಳೆ ಪೊಲೀಸ್ ಸಿಬ್ಬಂದಿಗೆ ಚಾಕು ಇರಿತವಾಗಿದ್ದು, ಈ‌ ವೇಳೆ ಪೊಲೀಸರು ಆರೋಪಿಯ ಎರಡೂ ಕಾಲಿಗೆ ಗುಂಡು ಹಾರಿಸಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಪಾಲಹಳ್ಳಿ ಗ್ರಾಮದ ಯುವಕ ಸುಪ್ರೀತ್ ಅಲಿಯಾಸ್ ಸುಪ್ಪಿನನ್ನು ಜ.18 ರಾತ್ರಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.ಕೊಲೆ ಪ್ರಕರಣವನ್ನು ಬೆನ್ನತ್ತಿದ ಪೊಲೀಸರು ಪ್ರಮುಖ ಆರೋಪಿ ಪ್ರಮೋದ್‌ ಎಂಬಾತನನ್ನು ಹಿಡಿಯುವ ವೇಳೆ ಪೊಲೀಸ್ ಕಾನ್‌ಸ್ಟೇಬಲ್‌ ಶರತ್ ಎಂಬುವವರ ಮೇಲೆ ಹಲ್ಲೆಗೆ ಯತ್ನಿಸಿದ್ದಲ್ಲದೆ, ಬಲ ತೋಳಿಗೆ ಚಾಕುವಿನಿಂದ ಇರಿದು ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾನೆ ಎನ್ನಲಾಗಿದೆ. ಈ ವೇಳೆ ಸ್ಥಳದಲ್ಲೇ ಇದ್ದ ಪೊಲೀಸ್ ಅಧಿಕಾರಿಗಳು ಪ್ರಮೋದ್‌ ನ ಎರಡು ಕಾಲಿಗೂ ಗುಂಡು ಹಾರಿಸಿ ಬಂಧಿಸಿದ್ದಾರೆ ಎನ್ನಲಾಗಿದೆ.ಈ ಘಟನೆ ಕರೀಘಟ್ಟ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ಚಾಕು ಇರಿತಕ್ಕೊಳಗಾದ ಸಿಬ್ಬಂದಿ ಹಾಗೂ ಗುಂಡೇಟು ತಿಂದ ಪ್ರಮೋದನನ್ನು ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣದಲ್ಲಿ ಇನ್ನೂ ಹತ್ತು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. Click