ನ್ಯೂಸ್ ನಾಟೌಟ್: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಮಿತಿ ಮೀರಿದ್ದು ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ಈಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಮೈಕ್ರೋ ಫೈನಾನ್ಸ್ ಹಾವಳಿಗೆ ಹೆದರಿ ಮಹಿಳೆಯೊಬ್ಬರು ವಿಷದ ಮಾತ್ರೆ ನುಂಗಿ ಜೀವ ಕಳೆದುಕೊಂಡಿದ್ದಾರೆ.
ಮೈಸೂರಿನ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಮಹಿಳೆ ಜಯಶೀಲ (53) ಪ್ರಾಣ ಬಿಟ್ಟವರು ಎಂದು ಗುರುತಿಸಲಾಗಿದೆ. ಈ ಮಹಿಳೆ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆ ಎಂದು ಐಐಎಫ್ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ನಲ್ಲಿ 5 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು. ಇದಕ್ಕಾಗಿ ಪ್ರತಿ ತಿಂಗಳು 20 ಸಾವಿರ ರೂಪಾಯಿ ಕಂತುಗಳನ್ನು ಕಟ್ಟುತ್ತಿದ್ದರು. ಆದರೆ ಇತ್ತಿಚೇಗೆ ಹಸುವಿನ ಆಕಸ್ಮಿಕ ಮರಣದಿಂದ ಮಹಿಳೆ ಸಂಕಷ್ಟಕ್ಕೆ ಸಿಲುಕಿದ್ದರು. ಇದರಿಂದ ಇಎಂಐ ಕಟ್ಟಲು ಸಮಸ್ಯೆ ಎದುರಾಗಿತ್ತು.
ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದ ಮಹಿಳೆ, ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಜಮೀನಿನಲ್ಲಿ ವಿಷದ ಮಾತ್ರೆಗಳನ್ನು ನುಂಗಿ ಒದ್ದಾಡುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗಮಧ್ಯೆ ಮಹಿಳೆ ಜೀವ ಬಿಟ್ಟಿದ್ದಾರೆ. ಸದ್ಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಮಾಡುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಮೈಕ್ರೋ ಫೈನಾನ್ಸ್ನಿಂದ ಸಮಸ್ಯೆಯಾಗಿ ಗ್ರಾಮಸ್ಥರು ಊರು ಬಿಡುತ್ತಿದ್ದಾರೆ, ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾದ ಸಿಎಂ ಸಿದ್ದರಾಮಯ್ಯ ಕಾನೂನು ಕ್ರಮದ ಎಚ್ಚರಿಕೆ ನೀಡಿ, ಬಡ್ಡಿದರಗಳಿಗೆ ಮಿತಿ ಸೂಚಿಸಿದ್ದರು. ಆದರೆ, ಈಗ ಸಿಎಂ ತವರು ಕ್ಷೇತ್ರದಲ್ಲೆ ಮಹಿಳೆ ಸಾವನ್ನಪ್ಪಿದ್ದಾರೆ.
Click