ನ್ಯೂಸ್ ನಾಟೌಟ್: ಇತ್ತೀಚೆಗೆ ಸಂಭವಿಸಿದ ಕರ್ನೂಲ್ ಬಸ್ ಅಪಘಾತವನ್ನು ಮರೆಯುವ ಮುನ್ನವೇ ತೆಲಂಗಾಣದ ರಂಗರೆಡ್ಡಿ ಜಿಲ್ಲೆಯ ಚೆವೆಲ್ಲಾದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿ 20 ಮಂದಿ ಮೃತಪಟ್ಟು 24 ಜನರು ಗಾಯಗೊಂಡ ಘಟನೆ ವರದಿಯಾಗಿದೆ.
ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಈ ಭೀಕರ ಅವಘಡ ಸಂಭವಿಸಿದ್ದು,.ತಂದೂರ್ ಡಿಪೋಗೆ ಸೇರಿದ ಬಸ್ ಅಪಘಾತಕ್ಕೀಡಾಗಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದವರ ಮೇಲೆ ಜಲ್ಲಿಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದು ಲಾರಿಯಲ್ಲಿದ್ದ ಜಲ್ಲಿಕಲ್ಲುಗಳು ಪ್ರಯಾಣಿಕರ ಮೇಲೆ ಬಿದ್ದ ಪರಿಣಾಮ ಇಪ್ಪತ್ತು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ 18 ಪ್ರಯಾಣಿಕರು, ಇಬ್ಬರು ಬಸ್ ಮತ್ತು ಟಿಪ್ಪರ್ ಚಾಲಕರು ಸೇರಿದ್ದಾರೆ.
ಒಂದು ವರ್ಷದ ಮಗು ಸೇರಿದಂತೆ 11 ಮಹಿಳೆಯರು ಮತ್ತು 9 ಪುರುಷರು ಸಾವನ್ನಪ್ಪಿದ್ದಾರೆ. 24 ಜನರು ಗಾಯಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಘಟನೆಯಿಂದ ಚೆವೆಲ್ಲಾ-ವಿಕಾರಾಬಾದ್ ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಗಾಯಾಳುಗಳನ್ನು ಚೆವೆಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಘಟನಾ ಸ್ಥಳದಲ್ಲಿ ಜೆಸಿಬಿ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.













