ನ್ಯೂಸ್ ನಾಟೌಟ್ :ರಾಜ್ಯದಲ್ಲಿ ಮಾರ್ಚ್ 1 ರಿಂದ (ಶನಿವಾರ) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 20ರ ವರೆಗೆ ಪರೀಕ್ಷೆ ನಡೆಯಲಿದೆ.
ಈಗಾಗಲೇ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿರುವ ಶಿಕ್ಷಣ ಇಲಾಖೆ ಮೊದಲ ಬಾರಿಗೆ ವೆಬ್ ಕಾಸ್ಟಿಂಗ್ ಕಣ್ಗಾವಲು ವ್ಯವಸ್ಥೆ ಮಾಡಿದೆ. ಕಳೆದ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಜಾರಿ ಮಾಡಲಾಗಿತ್ತು. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೂ ವ್ಯವಸ್ಥೆ ಮಾಡುವ ಮೂಲಕ ಪರೀಕ್ಷಾ ಚಟುವಟಿಕೆಗಳ ಮೇಲೆ ನಿಗಾ ಇಟ್ಟಿದೆ. ಪರೀಕ್ಷಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.
ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. 3,35,468 ಗಂಡು ಮಕ್ಕಳು, 3,78,389 ಹೆಣ್ಣು ಮಕ್ಕಳು ಹಾಗೂ ಐವರು ತೃತೀಯ ಲಿಂಗಿಗಳಿದ್ದಾರೆ. ಒಟ್ಟು 1,171 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. ಇದರೊಂದಿಗೆ 2,342 ಸ್ಥಾನಿಕ ಜಾಗೃತದಳ, 76 ಉತ್ತರ ಪತ್ರಿಕೆ ಮೌಲ್ಯಮಾಪನ ಕೇಂದ್ರಗಳು ಹಾಗೂ 31,000 ಮೌಲ್ಯಮಾಪಕರನ್ನ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.